ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ಮೇಲ್ದರ್ಜೆಗೆ ಎರಿಸಲು ಎರಡು ತಿಂಗಳಲ್ಲಿ ರೂಪರೇಷೆ ತಯಾರಿಸಿ ಕ್ರಮ ವಹಿಸಲಾಗುವುದು ಎಂದು ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.
ರೈಲ್ವೆ ಅಭಿವೃದ್ದಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಲು ಇಲ್ಲಿಗೆ ಭೇಟಿ ನೀಡಿರುವ ಅವರು ಸೆಂಟ್ರಲ್ ರೈಲು ನಿಲ್ದಾಣ ಹಾಗೂ ಕಂಕನಾಡಿಯ ಮಂಗಳೂರು ಜಂಕ್ಷನ್ ರೈಲು ನಿಲ್ದಾಣಗಳಿಗೆ ಭೇಟಿ ನೀಡಿ ಸೌಕರ್ಯಗಳನ್ನು ಪರಿಶೀಲಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, '40 ವರ್ಷಗಳಿಂದ ಮಂಗಳೂರಿನಲ್ಲಿ ರೈಲ್ವೆ ಸೌಕರ್ಯ ಆಭಿವೃದ್ಧಿ ನನೆಗುದಿಗೆ ಬಿದ್ದಿದೆ. ಕೇರಳ ಮತ್ತು ಗೋವಾ, ತಮಿಳುನಾಡು, ಮಹಾರಾಷ್ಟ್ರ ನಡುವೆ ಮಂಗಳೂರು , ಕಾರವಾರ ಭಾಗದಲ್ಲಿ ರೈಲ್ವೆ ಸೌಕರ್ಯ ಅಭಿವೃದ್ಧಿ ನಿರೀಕ್ಷಿತ ರೀತಿಯಲ್ಲಿ ನಡೆದಿಲ್ಲ. ತಜ್ಞರು, ಜನಪ್ರತಿನಿಧಿಗಳು, ಅಧಿಕಾರಿಗಳನ್ನು ಒಗ್ಗೂಡಿಸಿಕೊಂಡು ಕರಾವಳಿಯ ರೈಲು ಮೂಲಸೌಕರ್ಯ ಅಭಿವೃದ್ಧಿಗೆ ಎರಡು ತಿಂಗಳಲ್ಲಿ ನೀಲನಕ್ಷೆ ತಯಾರಿಸಲಿದ್ದೇವೆ' ಎಂದು ಅವರು ಹೇಳಿದರು.
ಪಾಲಕ್ಕಾಡ್ ವಿಭಾಗದ ಹಿರಿಯ ಅಧಿಕಾರಿಗಳು ಸಚಿವರಿಗೆ ಮಂಗಳೂರಿನಲ್ಲಿ ಪ್ರಗತಿಯಲ್ಲಿರುವ ರೈಲ್ವೆ ಸೌಕರ್ಯಗಳ ಆಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ನೀಡಿದರು.
ಸಂಸದರಾದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ್ ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ಹರೀಶ್ ಪೂಂಜ,
ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ಸಚೇತಕ ಪ್ರೇಮಾನಂದ ಶೆಟ್ಟಿ, ಪಾಲಿಕೆ ಸದಸ್ಯರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.