ಮಂಗಳೂರು: ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಜಿಲ್ಲಾಡಳಿತ ವತಿಯಿಂದ ಇದೇ 17ಮತ್ತು 18ರಂದು ಆಯೋಜಿಸಲು ಉದ್ದೇಶಿಸಿದ್ದ ಪಿಲಿಕುಳ ಕಂಬಳೋತ್ಸವವನ್ನು ಗ್ರಾಮ ಪಂಚಾಯಿತಿ ಉಪಚುನಾವಣೆಯ ಕಾರಣಕ್ಕಾಗಿ ಮುಂದೂಡಲಾಗಿದೆ.
ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ಹಾಗೂ ತೆರವಾಗಿರುವ ಸದಸ್ಯ ಸ್ಥಾನಗಳ ಭರ್ತಿಗೆ ಉಪ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗವು ಘೋಷಿಸಿದೆ. ಈ ಉಪ ಚುನಾವಣಣೆಯ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಇದೇ 16ರಿಂದ 26ರವರೆಗೆ ಜಾರಿಯಲ್ಲಿರುತ್ತದೆ. ಮೂಡುಶೆಡ್ಡೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪಿಲಿಕುಳ ಕಂಬಳವನ್ನು ಮುಂದೂಡಲಾಗಿರುತ್ತದೆ. ಮುಂದಿನ ದಿನಾಂಕ ನಂತರದ ದಿನಗಳಲ್ಲಿ ತಿಳಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಕ ಪ್ರದೀಪ್ ಡಿಸೋಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಲ್ಲಿ ಕಂಬಳ ನಡೆಸಲು ಜಿಲ್ಲಾಡಳಿತವು ಸಕಲ ಸಿದ್ಧತೆಗಳನ್ನು ನಡೆಸಿತ್ತು. ಕಂಬಳದ ಓಟದ ಕರೆಗಳ ನಿರ್ಮಾಣ ಕಾರ್ಯವೂ ಪ್ರಗತಿಯಲ್ಲಿತ್ತು. ಕಂಬಳಗಳ ವೇಳಾ ಪಟ್ಟಿ ಈಗಾಗಲೇ ಪ್ರಕಟವಾಗಿರುವುದರಿಂದ ಪಿಲಿಕುಳ ಕಂಬಳಕ್ಕೆ ಮತ್ತೆ ದಿನಾಂಕ ಹೊಂದಿಸಬೇಕಿದೆ.
‘ಅನಿವಾರ್ಯ ಕಾರಣಗಳಿಂದ ಪಿಲಿಕುಳ ಕಂಬಳವನ್ನು ಜಿಲ್ಲಾಡಳಿತ ಮುಂದೂಡಿದೆ. ಸದ್ಯಕ್ಕೆ ಈ ವರ್ಷದ ಎಲ್ಲ ಕಂಬಳಗಳ ವೇಳಾಪಟ್ಟಿ ನಿಗದಿಯಾಗಿದೆ. ಹಾಗಾಗಿ ಪಿಲಿಕುಳ ಕಂಬಳಕ್ಕೆ ದಿನಾಂಕ ಮರು ನಿಗದಿ ಬಗ್ಗೆ ಜಿಲ್ಲಾಡಳಿತ, ಜನಪ್ರತಿನಿಗಳು ಹಾಗೂ ಕಂಬಳ ಸಮಿತಿಯ ಪ್ರಮುಖರು ಸೇರಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದೇವೆ’ ಎಂದು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ ಶೆಟ್ಟಿ ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.