ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳಾದ ಮುಸ್ತಫಾ ಪೈಚಾರ್ ಹಾಗೂ ರಿಯಾಜ್ ಎಚ್.ವೈ. ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಜನರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಸಾರ್ವಜನಿಕ ಸ್ಥಳದಲ್ಲಿ ಹರಿತವಾದ ಆಯುಧಗಳಿಂದ ಕೊಲೆ ಮಾಡಲಾಗಿತ್ತು. ಈ ಬಗ್ಗೆ 2022ರ ಜುಲೈ 27 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಅಲ್ಲದೇ ಎನ್‌ಐಎ ಕೂಡ ಆ.4 ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿತ್ತು.
‘ಪ್ರಕರಣದಲ್ಲಿ ಇದುವರೆಗೆ 19 ಆರೋಪಿಗಳನ್ನು ಬಂಧಿಸಲಾಗಿದೆ. ಮುಸ್ತಫಾ ಪೈಚಾರ್ ಪ್ರಕರಣದ ಪ್ರಮುಖ ಸಂಚುಕೋರನಾಗಿದ್ದು, ತಲೆಮರೆಸಿಕೊಂಡಿದ್ದ ಈತನನ್ನು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಂಧಿಸಲಾಗಿತ್ತು. ರಾಜ್ಯದಲ್ಲಿ ಪಿಎಫ್‌ಐ ಸೇವಾ ತಂಡದ ಮಾಸ್ಟರ್ ತರಬೇತುದಾರನಾಗಿದ್ದ. ಈತ ಈ ತಂಡವನ್ನು ಮುನ್ನಡೆಸುತ್ತಿದ್ದ. ತನಿಖೆ ವೇಳೆ ಎಚ್.ವೈ.ರಿಯಾಜ್ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್‌ಗೆ ಆಶ್ರಯ ನೀಡಿದ್ದ’ ಎಂದು ಎನ್‌ಐಎ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದೆ.
ಭಾರತದಿಂದ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಆರೋಪಿ ರಿಯಾಜ್‌ನನ್ನು ಜೂನ್ 3ರಂದು ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್‌ಐಎ ಬಂಧಿಸಿತ್ತು.
ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಉಳಿದ ಏಳು ಮಂದಿಯ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಎನ್‌ಐಎ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.