ಸುರತ್ಕಲ್: ಗೋವಿಂದದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಇತಿಹಾಸ ಪ್ರಾಧ್ಯಾಪಕ ಪ್ರೊ.ಪಿ.ಕೆ.ಮೊಯಿಲಿ (94) ಗುರುವಾರ ಸ್ವಗೃಹದಲ್ಲಿ ನಿಧನರಾದರು.
ಅವರಿಗೆ ಆರು ಪುತ್ರಿಯರು ಇದ್ದಾರೆ.
ಮೂಲತಃ ಪಣಂಬೂರಿನವರಾದ ಪಿ.ಕೆ.ಮೊಯಿಲಿ ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲೆಯ ಮೊದಲ ತಂಡದ ವಿದ್ಯಾರ್ಥಿಯಾಗಿದ್ದರು. ಮೂಡುಬಿದಿರೆಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕನಾಗಿ ಸೇರಿದ್ದ ಅವರು ಮಂಗಳೂರಿನಲ್ಲಿ ಶಿಕ್ಷಕ ತರಬೇತಿ, ದಕ್ಷಿಣ ಭಾರತ ಹಿಂದಿ ಪ್ರಚಾರಸಭೆಯ ರಾಷ್ಟ್ರಭಾಷಾ ಪ್ರವೀಣ ಪದವಿ, ಬಿ.ಎ.ಪದವಿ ಪಡೆದರು. ಪಂಜದಲ್ಲಿ ಹೈಸ್ಕೂಲ್ ಶಿಕ್ಷಕರಾಗಿ ಸೇವೆಗೆ ಸೇರಿದ್ದ ಅವರು ಬೈಂದೂರು, ಮುಡಿಪು, ಕಾರ್ಕಳದ ಪ್ರೌಢಶಾಲೆಗಳಲ್ಲಿ ಶಿಕ್ಷಕರಾಗಿದ್ದರು. ಬನರಾಸ್ ವಿಶ್ವವಿದ್ಯಾನಿಲಯದಿಂದ ಇತಿಹಾಸ ವಿಷಯದಲ್ಲಿ ಎಂ.ಎ. ಪದವಿಯನ್ನು ಪಡೆದು ಪದವಿ ಪೂರ್ವ ಕಾಲೇಜಿನಲ್ಲಿ ಅಧ್ಯಾಪಕರಾಗಿ ಕೆಲಸ ಮಾಡಿದ್ದರು.
1967ರಲ್ಲಿ ಗೋವಿಂದ ದಾಸ ಕಾಲೇಜು ಆರಂಭಗೊಂಡಾಗ ಇತಿಹಾಸ ಪ್ರಾಧ್ಯಾಪಕರಾಗಿ ಸೇರಿದ್ದ ಅವರು, 1984ರಿಂದ 1988ರವರೆಗೆ ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ್ದರು.
ನಿವೃತ್ತಿಯ ನಂತರ ನಾರಾಯಣಗುರು ಪ್ರೌಢ ಶಾಲೆ, ಕಾರ್ಕಳದ ವೆಂಕಟರಮಣ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿದ್ದರು. ಅವರು ಕಥೆ, ಲೇಖನಗಳನ್ನು ಬರೆದಿದ್ದರು.
ಅಂತಿಮ ದರ್ಶನ ನ.22ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.