ADVERTISEMENT

ಮಂಗಳೂರು: ಬಸ್‌ಗಳಿಗೆ ಬಾಗಿಲು ಅಳವಡಿಸಲು ಗಡುವು

ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

​ಪ್ರಜಾವಾಣಿ ವಾರ್ತೆ
Published 29 ಫೆಬ್ರುವರಿ 2024, 7:55 IST
Last Updated 29 ಫೆಬ್ರುವರಿ 2024, 7:55 IST
ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾತನಾಡಿದರು
ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾತನಾಡಿದರು   

ಮಂಗಳೂರು: 2017ರಿಂದ ನೋಂದಣಿಯಾಗಿರುವ ಎಲ್ಲ ಸಾರ್ವಜನಿಕ ಬಸ್‌ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿಡಾವಿಟ್ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದರು.

ಬುಧವಾರ ಇಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. 2017ರ ನಂತರ ನೋಂದಣಿಯಾಗುವ ಬಸ್‌ಗಳು ಕಡ್ಡಾಯವಾಗಿ ಬಾಗಿಲನ್ನು ಹೊಂದಿರಬೇಕು ಎಂದು ಕಾನೂನು ಇದೆ. ಒಂದು ತಿಂಗಳೊಳಗೆ ಬಸ್‌ಗಳಿಗೆ ಬಾಗಿಲು ಅಳವಡಿಸಿರುವ ಬಗ್ಗೆ ಮಾಲೀಕರು ಅಫಿಡಾವಿಟ್ ಸಲ್ಲಿಸಬೇಕು ಎಂದರು.

ಸಾರ್ವಜನಿಕರ ಜೀವರಕ್ಷಣೆಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲಾಗದು. ಇದರಲ್ಲಿ ನಿರ್ಲಕ್ಷ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಬಸ್‌ಗಳಿಗೆ ಬಾಗಿಲು ಅಳವಡಿಸಬೇಕೆಂದು ಸಾರ್ವಜನಿಕರಿಂದಲೂ ತೀವ್ರ ಒತ್ತಡ ಬರುತ್ತಿದೆ. ಜನಸಂಪರ್ಕ ಸಭೆಗಳಲ್ಲಿಯೂ ಮನವಿಗಳು ಬಂದಿವೆ. ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಮತ್ತಿತರ ರಾಜ್ಯಗಳಲ್ಲೂ ಬಸ್‌ಗಳು ಬಾಗಿಲು ಅಳವಡಿಸಿ ಸಂಚರಿಸುತ್ತಿವೆ. ಬೆಂಗಳೂರಿನಲ್ಲಿಯೂ ಸಿಟಿ ಬಸ್‌ಗಳಲ್ಲಿ ಬಾಗಿಲು ಇರುವುದರಿಂದ ಸಾರ್ವಜನಿಕರ ಸಂಚಾರ ನಿರಾತಂಕವಾಗಿದೆ. ಇದರಿಂದ ಸಂಚಾರ ವ್ಯವಸ್ಥೆಯೂ ಸುಗಮವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿಯೂ ಈ ಕ್ರಮ ಜಾರಿಗೆ ತರಲಾಗುವುದು ಎಂದರು.

ADVERTISEMENT

ಜಿಲ್ಲೆಯ ಹಲವೆಡೆ ವಿವಿಧ ಕಾಮಗಾರಿಗಳಿಗಾಗಿ ಕೆಲವು ಏಜೆನ್ಸಿಗಳು ಅನುಮತಿ ಇಲ್ಲದೆ ಲೋಕೋಪಯೋಗಿ ರಸ್ತೆಗಳನ್ನು ಅಗೆದು, ಪೈಪ್, ಕೇಬಲ್ ಅಳವಡಿಸಿರುವ ಬಗ್ಗೆ ದೂರುಗಳು ಬಂದಿವೆ. ಅಂತಹವರಿಗೆ ನೋಟಿಸ್ ಜಾರಿ ಮಾಡಲು ಸೂಚಿಸಿದರು.

ನಗರದ ಸ್ಟೇಟ್‌ಬ್ಯಾಂಕ್ ಹ್ಯಾಮಿಲ್ಟನ್ ವೃತ್ತವನ್ನು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದ್ದು, ಸುಗಮ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದೆ. ವಾಹನ ಸವಾರಿಗೆ ಗೊಂದಲವಾಗುತ್ತದೆ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ನಾಗರಿಕ ಸಂಘಟನೆಗಳ ಪ್ರತಿನಿಧಿಗಳು ತಿಳಿಸಿದರು. ಇಡೀ ವೃತ್ತವನ್ನು ಸಮಗ್ರವಾಗಿ ಪುನರ್‌ನಿರ್ಮಿಸಿ ಸಂಚಾರ ವ್ಯವಸ್ಥೆ ಸುಗಮಗೊಳಿಸುವಂತೆ ಅವರು ಆಗ್ರಹಿಸಿದರು.

‘ಡಿಸಿ ಕಚೇರಿಯ ಮುಂದಿನ ವೃತ್ತವೇ ಈ ರೀತಿ ಅನಿಶ್ಚಿತತೆ ಸ್ಥಿತಿಯಲ್ಲಿ ನಿಲ್ಲಿಸಿರುವುದು ಸರಿಯಲ್ಲ. ವೃತ್ತದ ಸುತ್ತಮುತ್ತ ಪಾರ್ಕಿಂಗ್, ಫ್ಲೆಕ್ಸ್, ಕಟೌಟ್‌ಗಳ ಸಮಸ್ಯೆಯೂ ಇದೆ. ಸ್ಮಾರ್ಟ್‌ಸಿಟಿ ಕಾಮಗಾರಿ ಯಾವುದೇ ಇದ್ದರೂ ಅದು ಸಂಪೂರ್ಣವಾಗಿ ಮುಕ್ತಾಯವಾಗಬೇಕು. ಕಾಮಗಾರಿ ಪೂರ್ಣಗೊಂಡ ನಂತರ ಇನ್ನೊಂದು ಸಮಸ್ಯೆ ಸೃಷ್ಟಿಯಾಗಬಾರದು. ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಿ, ಸ್ಟೇಟ್‌ಬ್ಯಾಂಕ್ ವೃತ್ತ ಸಂಚಾರ ಸಮಸ್ಯೆಯನ್ನು ಶೀಘ್ರ ಇತ್ಯರ್ಥ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ನಗರದ ಲೇಡಿಹಿಲ್, ಕಂಕನಾಡಿ, ವೆಲೆನ್ಸಿಯಾ ಮತ್ತಿತರ ಕಡೆ ಸಂಜೆಯಾಗುತ್ತಿದ್ದಂತೆ ಹಳೆಯ ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸಿ, ಅದರಲ್ಲಿ ತಿಂಡಿ– ತಿನಿಸು ಮಾರಾಟ ಮಾಡಲಾಗುತ್ತಿದೆ.  ರಸ್ತೆಯಲ್ಲಿ ಗ್ಯಾಸ್ ಸಿಲಿಂಡರ್ ಇಟ್ಟು, ಎಣ್ಣೆ ಬಳಸಿಕೊಂಡು ತಿಂಡಿ ತಯಾರಿಸುತ್ತಿರುವುದು ಪಾದಚಾರಿಗಳಿಗೂ ಅಪಾಯಕಾರಿ ಮತ್ತು ಸುಗಮ ಸಂಚಾರಕ್ಕೆ ಸಮಸ್ಯೆಯಾಗುತ್ತಿರುವ ದೂರುಗಳ ಬಗ್ಗೆ ತಪಾಸಣೆ ನಡೆಸಿ, ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ, ಮಹಾನಗರಪಾಲಿಕೆ ಮತ್ತು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಉಪ ಪೊಲೀಸ್ ಆಯುಕ್ತ ದಿನೇಶ್ ಕುಮಾರ್, ಮಹಾನಗರಪಾಲಿಕೆ ಆಯುಕ್ತ ಆನಂದ್, ಆರ್‌ಟಿಒ ಶ್ರೀಧರ್ ಮಲ್ಲಾಡ್, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಅಮರನಾಥ್ ಜೈನ್ ಮತ್ತಿತರರು ಇದ್ದರು.

ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ

ಮಂಗಳೂರು ನಗರ ವ್ಯಾಪ್ತಿಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರತ್ಕಲ್ ಕೂಳೂರು ಕೊಟ್ಟಾರ ಚೌಕಿ ಕುಂಟಿಕಾನ ಪಂಪ್‌ವೆಲ್ ಮೇಲ್ಸೇತುವೆಗಳಲ್ಲಿ ದಾರಿದೀಪದ ವ್ಯವಸ್ಥೆ ಇಲ್ಲ. 10 ವರ್ಷಗಳಿಂದ ಈ ಸಮಸ್ಯೆ ಇದ್ದರೂ ಹೆದ್ದಾರಿ ಪ್ರಾಧಿಕಾರ ಯಾವುದೇ ಕ್ರಮ ವಹಿಸಿಲ್ಲ ಎಂದು ಜಿಲ್ಲಾಧಿಕಾರಿ ಅಸಮಾಧಾನ ವ್ಯಕ್ತಪಡಿಸಿದರು. ಈ ಬಗ್ಗೆ ಮಹಾನಗರಪಾಲಿಕೆಯೊಂದಿಗೂ ವ್ಯವಹರಿಸಿಲ್ಲ. ಇದರಿಂದ ಹಲವಾರು ಅಪಘಾತಗಳು ಸಂಭವಿಸಿ ಜೀವಹಾನಿಯಾಗಿರುವ ಘಟನೆಗಳು ನಡೆದಿವೆ. ಹೆದ್ದಾರಿಯ ಮೂಲ ಯೋಜನೆಯಲ್ಲಿಯೇ ಇದನ್ನು ಯಾಕೆ ಸೇರಿಸಿಲ್ಲ ಎಂಬುದರ ಬಗ್ಗೆ ವಿವರಣೆ ನೀಡುವಂತೆ ಜಿಲ್ಲಾಧಿಕಾರಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.