ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯ ವೇಳೆ ಬಿಜೆಪಿ ಬೆಂಬಲಿತ ಸದಸ್ಯರು ಪುತ್ತೂರು ಶಾಸಕರನ್ನು ಏಕವಚನದಲ್ಲಿ ನಿಂದಿಸಿ ಅವಹೇಳನ ಮಾಡಿದ್ದಾರೆ ಎಂದು ಕಾಂಗ್ರೆಸ್ ಬೆಂಬಲಿತ ಸದಸ್ಯರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ದೂರು ನೀಡಿದ್ದಾರೆ.
ನ.16ರಂದು ಗ್ರಾಮ ಪಂಚಾಯಿತಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ, ‘15ನೇ ಹಣಕಾಸಿನ ಕ್ರಿಯಾ ಯೋಜನೆಯನ್ನು ಕಾಂಗ್ರೆಸ್ ಬೆಂಬಲಿತ ಸದಸ್ಯರ ಗಮನಕ್ಕೆ ತಾರದೆ ತಯಾರಿಸಿದ್ದು, ಅದನ್ನು ಕಾಟಾಚಾರಕ್ಕೆ ಸಭೆಯಲ್ಲಿ ಓದಿ ಹೇಳಿದ್ದಾರೆ. ಆಗ ಕಾಂಗ್ರೆಸ್ ಬೆಂಬಲಿತ ಸದಸ್ಯರು ಪ್ರಶ್ನಿಸಿದಾಗ ಸದಸ್ಯೆ ಗೀತಾ ದಾಸರಮೂಲೆ ಅವರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಬಿಜೆಪಿ ಪರ ಕೆಲಸ ಮಾಡುತ್ತಿರುವ ಇಲ್ಲಿನ ಸಿಬ್ಬಂದಿಯನ್ನು ವರ್ಗಾವಣೆ ಮಾಡಬೇಕು’ ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.
ಕ್ರಿಯಾಯೋಜನೆ ಬಗ್ಗೆ ಚರ್ಚಿಸುವಾಗ ಶಾಸಕರ ಬಗ್ಗೆ ಅವಹೇಳನಕಾರಿ ಮತ್ತು ಏಕ ವಚನ ಬಳಸಿ ಟೀಕೆ ಮಾಡಿದ್ದಾರೆ. ಗ್ರಾಮ ಪಂಚಾಯಿತಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಮುಂದಾಗದೆ ಭ್ರಷ್ಟಾಚಾರ ನಡೆಸುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್ ಬೆಂಬಲಿತ ಸದಸ್ಯರಿಗೆ ಹಲ್ಲೆ ನಡೆಸಿದ್ದು, ಈ ಬಗ್ಗೆಯೂ ಕ್ರಮ ತೆಗೆದುಕೊಂಡಿಲ್ಲ ಎಂದು ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಸತೀಶ್ ಶೆಟ್ಟಿ ಹೆನ್ನಾಳ, ಭವಾನಿ, ಗೀತಾ ದಾಸರಮೂಲೆ, ಸವಿತಾ ಹರೀಶ್ ಹೇಳಿದ್ದಾರೆ.
ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಜಯಪ್ರಕಾಶ್ ಮೂಲಕ ದೂರನ್ನು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.