ಉಜಿರೆ: ಇಂದು ಎಲ್ಲ ಸರ್ಕಾರಿ ಶಾಲೆಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮೂಲ ಸವಲತ್ತುಗಳೊಂದಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ ಅಲ್ಲಿ ಸಿಗುವ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಉಜಿರೆಯ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರಕ್ಕೆ ಸಾಗಾಟ ವಾಹನ, ಯಂತ್ರೋಪಕರಣಗಳ ವಿತರಣೆ, 507 ಶಾಲೆಗಳಿಗೆ 4,044 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಂಗಳವಾರ ಧರ್ಮಸ್ಥಳದಲ್ಲಿ ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಬೇಕು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನೀಡಿದ ಪೀಠೋಪಕರಣಗಳು, ಶಾಲಾಕೊಠಡಿ ನಿರ್ಮಾಣ, ಕ್ರೀಡಾಂಗಣ, ಆಟದ ಸಾಮಗ್ರಿ ಹಾಗೂ ಬೋಧನೋಪಕರಣಗಳನ್ನು ವಿದ್ಯಾರ್ಥಿಗಳು ಬಳಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಸ್ವಚ್ಛತೆ ಕಾಪಾಡುವ ಬಗ್ಯೆ ಸಾರ್ವಜನಿಕರು ಆಸಕ್ತಿ, ಕಾಳಜಿ ಮತ್ತು ಸಾಮಾಜಿಕಪ್ರಜ್ಞೆ ಮೈಗೂಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್. ಮಾತನಾಡಿ, ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಮೂಲ ಸವಲತ್ತು ಒದಗಿಸಲು ಆದ್ಯತೆ ನೀಡಲಾಗುತ್ತದೆ. ಈ ವರ್ಷ 1,030 ಅತಿಥಿ ಶಿಕ್ಷಕರನ್ನು ಸರ್ಕಾರಿ ಶಾಲೆಗಳಲ್ಲಿ ನೇಮಿಸಲಾಗಿದೆ ಎಂದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಆನಂದ ಕೆ. ಮಾತನಾಡಿ, ಸ್ವಚ್ಛತೆ ನಿರ್ವಹಣೆ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಧರ್ಮಸ್ಥಳದ ಸೇವೆಯನ್ನು ಶ್ಲಾಘಿಸಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ದ.ಕ.ಜಿಲ್ಲಾ ಉಪನಿರ್ದೇಶಕ ವೆಂಕಟೇಶ್ ಸುಬ್ರಾಯ ಪಟಗಾರ್ ಮಾತನಾಡಿ, ಧರ್ಮಸ್ಥಳದ ಕೊಡುಗೆಯಿಂದಾಗಿ ಜಿಲ್ಲೆಯಲ್ಲಿ ಉತ್ತಮ ಶೈಕ್ಷಣಿಕ ಸಾಧನೆ ಮಾಡಲು ಸಾಧ್ಯವಾಗಿದೆ ಎಂದರು.
ಹೇಮಾವತಿ ವೀ.ಹೆಗ್ಗಡೆ, ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಪ್ರಭಾರ ಕ್ಷೇತ್ರಶಿಕ್ಷಣಾಧಿಕಾರಿ ವೆಂಕಟೇಶ ತುಳುಪುಳೆ, ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾ ಭಾಗವಹಿಸಿದ್ದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಸ್ವಾಗತಿಸಿದರು. ಶಿವಾನಂದ ಆಚಾರ್ಯ ವಂದಿಸಿದರು.
₹2.75 ಕೋಟಿ ವೆಚ್ಚದಲ್ಲಿ ದಕ್ಷಿಣಕನ್ನಡ, ಉಡುಪಿ, ಕೊಡಗು ಮತ್ತು ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ಡೆಸ್ಕ್-ಬೆಂಚ್ ವಿತರಿಸಲಾಗುತ್ತಿದೆ. ಶಾಲೆಗಳಿಗೆ ಮೂಲ ಸವಲತ್ತು ಒದಗಿಸಲು ₹ 38.01 ಕೋಟಿ ವಿನಿಯೋಗಿಸಲಾಗಿದೆ. ರಾಜ್ಯದ 11 ಸಾವಿರ ಶಾಲೆಗಳಿಗೆ ₹ 26 ಕೋಟಿ ವೆಚ್ಚದಲ್ಲಿ 72 ಸಾವಿರ ಜೊತೆ ಬೆಂಚ್ ಡೆಸ್ಕ್‌ಗಳನ್ನು ಇದುವರೆಗೆ ವಿತರಿಸಲಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಸಿಇಒ ಅನಿಲ್ ಕುಮಾರ್ ಎಸ್.ಎಸ್. ತಿಳಿಸಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾಸೀತಾರಾಮನ್ ಧರ್ಮಸ್ಥಳಕ್ಕೆ ನಾಳೆ
ಉಜಿರೆ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನ.14ರಂದು ಬೆಳಿಗ್ಗೆ 10ಕ್ಕೆ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ₹ 600 ಕೋಟಿ ಲಾಭಾಂಶ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ತಿಳಿಸಿದ್ದಾರೆ.
ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸುವರು.
ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ನಬಾರ್ಡ್ ಅಧ್ಯಕ್ಷ ಶಾಜಿ ಕೆ.ವಿ., ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭಾಗವಹಿಸುವರು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.