ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಬಲ್ನಾಡು ಗ್ರಾಮದ ತಿಮ್ಮಪ್ಪ ಶೆಟ್ಟಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬಲ್ನಾಡು ಉಜ್ರುಪಾದೆಯ ‘ಚನಿಲ ಮನೆ’ ನಿವಾಸಿಯಾಗಿರುವ ತಿಮ್ಮಪ್ಪ ಶೆಟ್ಟಿ ಸದ್ಯ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸದಸ್ಯರಾಗಿದ್ದಾರೆ. ಪಕ್ಷದ ಪುತ್ತೂರು ಮಂಡಲದ ಅಧ್ಯಕ್ಷರಾಗಿ ಮೂರು ಬಾರಿ ಕಾರ್ಯನಿರ್ವಹಿಸಿದ್ದಾರೆ. ಅಡಿಕೆ ಬೆಳೆಗಾರರಾಗಿರುವ ಅವರು ಎರಡು ಬಾರಿ ಕ್ಯಾಂಪ್ಕೊ ನಿರ್ದೇಶಕರಾಗಿದ್ದರು.
ಬಲ್ನಾಡಿನ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರರಾಗಿ 26 ವರ್ಷ ಕಾರ್ಯನಿರ್ವಹಿಸಿದ್ದ ಅವರು ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಬಿಎಸ್‌ಸಿ ಪದವಿ ಮುಗಿಸಿದ ನಂತರ ಕೃಷಿಯಲ್ಲಿ ತೊಡಗಿಸಿಕೊಂಡಿದ್ದು ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
‘ಪ್ರಜಾವಾಣಿ’ ಜೊತೆ ಮಾತನಾಡಿದ ಅವರು ‘ನಾಲ್ಕು ದಶಕಗಳಿಂದ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇನೆ. ಇದನ್ನು ಗುರುತಿಸಿ ಈ ಜವಾಬ್ದಾರಿ ನೀಡಿದ್ದಾರೆ. ಪ್ರಾಧಿಕಾರದ ವ್ಯಾಪ್ತಿಗೆ ಬರುವ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಶಾಸಕರ ಜೊತೆ ಚರ್ಚಿಸಿ ಕಾರ್ಯಯೋಜನೆಗಳನ್ನು ಸಿದ್ಧಪಡಿಸಲಾಗುವುದು. ಕರಾವಳಿಯ ಅಭಿವೃದ್ಧಿಯಲ್ಲಿ ಪ್ರಾಧಿಕಾರಕ್ಕೆ ದೊಡ್ಡ ಪಾತ್ರವಿದೆ. ಅದನ್ನು ಸಮರ್ಪಕವಾಗಿ ನಿರ್ವಹಿಸಲು ಶ್ರಮಿಸುವೆ‘ ಎಂದರು.
ತಿಮ್ಮಪ್ಪ ಶೆಟ್ಟಿ ಅವರು ಬೆಳೆಯೂರುಗುತ್ತು ವೆಂಕಪ್ಪ ಶೆಟ್ಟಿ ಮತ್ತು ಉಮ್ಮಕ್ಕೆ ವಿ.ಶೆಟ್ಟಿ ಅವರ ಪುತ್ರ. ಪತ್ನಿ: ಹರಿಯಡ್ಕ ಪ್ರೇಮಲತಾ ಶೆಟ್ಟಿ. ಪುತ್ರಿ: ತೃಪ್ತಿ ಎಸ್.ಚೌಟ, ಪುತ್ರ: ಪ್ರತೀಕ್ ಶೆಟ್ಟಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.