ಮಂಗಳೂರು: ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಮುಕ್ಕದ ಶ್ರೀನಿವಾಸ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ಆಸ್ಪತ್ರೆಯು ಇದೇ 29ರಂದು ಸುರತ್ಕಲ್‌ನಿಂದ ಮುಕ್ಕಾದವರೆಗೆ ವಾಕಥಾನ್ ಹಮ್ಮಿಕೊಂಡಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾಹಿತಿ ನೀಡಿದ ಆಸ್ಪತ್ರೆಯ ಹೃದ್ರೋಗ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಸುಬ್ರಹ್ಮಣ್ಯ, ‘ಈ ವಾಕಥಾನ್‌ನಲ್ಲಿ ಸಂಸ್ಥೆಯ ವೈದ್ಯರು, ವಿದ್ಯಾರ್ಥಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಸೇರಿ ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ’ ಎಂದರು.
‘ಹೃದ್ರೋಗದ ಲಕ್ಷಣಗಳನ್ನು ಆರಂಭಿಕ ಹಂತಗಳಲ್ಲೇ ಪತ್ತೆ ಹಚ್ಚಿದರೆ ಹೃದಯಾಘಾತವನ್ನು ತಪ್ಪಿಸಬಹುದು. ಲಘು ಹೃದಯಾಘಾತದಿಂದ ಎದೆ ನೋವು ಉಂಟಾದರೂ, ಅದು ಗ್ರಾಸ್ಟ್ರಿಕ್‌ಗೆ ಸಂಬಂಧಿಸಿದ ಸಮಸ್ಯೆ ಎಂದುಅನೇಕರು ಕಡೆಗಣಿಸುತ್ತಾರೆ. ಇಸಿಜಿ ಅಥವಾ ಎಕೊ ತಪಾಸಣೆಯಿಂದ ಈ ನೋವು ಹೃದ್ರೋಗಕ್ಕೆ ಸಂಬಂಧಿಸಿದ್ದು ಹೌದೋ ಅಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಬಹುದು. ಹೃದಯದ ಬಗ್ಗೆ ಕಾಳಜಿ ವಹಿಸುವ ಬಗ್ಗೆ ಜಾಗೃತಿ ಮೂಡಿಸಲು ಇದೇ 26ರಿಂದ 30ರವರೆಗೆ ಸಂಸ್ಥೆಯಲ್ಲಿ ವಿಶೇಷ ಕಾರ್ಯಕ್ರಮಗಳನ್ನೂ ಹಮ್ಮಿಕೊಂಡಿದ್ದೇವೆ’ ಎಂದರು.
‘ಕೊರೊನಾ ಬಳಿಕ ಹೃದಯಾಘಾತದ ಪ್ರಮಾಣ ಹೆಚ್ಚಾಗಿದೆ. 40ವರ್ಷಗಳಿಗಿಂತ ಕಡಿಮೆ ವಯಸ್ಸಿನವರಲ್ಲೂ ಈ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಕೊರೊನಾಕ್ಕೂ ಹೃದಯಾಘಾತ ಹೆಚ್ಚಳಕ್ಕೂ ನೇರ ಸಂಬಂಧವಿರುವ ಬಗ್ಗೆ ಖಚಿತವಾಗಿ ಹೇಳಲಾಗದು. ಈ ಬಗ್ಗೆ ಹೆಚ್ಚಿನ ಅಧ್ಯಯನ ಅಗತ್ಯ ಇದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಕಾರ್ಯಾಚರಣೆ ವಿಭಾಗದ ವ್ಯವಸ್ಥಾಪಕಿ ಫ್ರೀಡಾ ಹಾಗೂ ವೈದ್ಯಕೀಯ ಅಧೀಕ್ಷಕ ಡೇವಿಡ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.