ಮಲೇಬೆನ್ನೂರು: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ಶುಕ್ರವಾರ ಬೆಳಕಿಗೆ ಬಂದಿದೆ.
ಆರೋಗ್ಯ ಇಲಾಖೆ ಸಿಬ್ಬಂದಿ ಕಾಲೇಜಿನ 348 ವಿದ್ಯಾರ್ಥಿಗಳ ಗಂಟಲು ದ್ರವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಗುರುವಾರ ಫಲಿತಾಂಶ ಬಂದಿದ್ದು, ಪ್ರಥಮ ಪಿಯು ವಿಜ್ಞಾನ ವಿಭಾಗದ 13, ದ್ವಿತೀಯ ವರ್ಷದ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದು ಖಚಿತವಾಗಿತ್ತು.
ಪುರಸಭಾ ಸಿಬ್ಬಂದಿ ಕಾಲೇಜನ್ನು ಸ್ವಾನಿಟೈಸ್ ಮಾಡಿದ್ದಾರೆ. ಸೋಂಕು ತಗುಲಿರುವ ವಿದ್ಯಾರ್ಥಿಗಳಲ್ಲಿ ಪಟ್ಟಣದ 12, ಹಿಂಡಸಗಟ್ಟೆಯ ಒಬ್ಬರು ಹಾಗೂ ಕುಂಬಳೂರಿನ ಇಬ್ಬರು ವಿದ್ಯಾರ್ಥಿಗಳಿದ್ದಾರೆ. ಸೋಂಕಿತರಿಗೆ ಮನೆಯಲ್ಲಿ ಪ್ರತ್ಯೇಕವಾಗಿರುವಂತೆ ಸೂಚಿಸಿದ್ದು, ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲಾಧಿಕಾರಿ ಅವರ ಸೂಚನೆ ಮೇರೆಗೆ ಒಂದು ವಾರ ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್ ಕೆ.ಬಿ. ರಾಮಚಂದ್ರಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್, ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ನಟರಾಜ್ ಮಾಹಿತಿ ನೀಡಿದ್ದಾರೆ.
ಟಿಎಚ್ಒ ಡಾ.ಚಂದ್ರಮೋಹನ್, ವೈದ್ಯಾಧಿಕಾರಿ ಡಾ.ಲಕ್ಷ್ಮೀದೇವಿ, ಪುರಸಭಾ ಮುಖ್ಯಾಧಿಕಾರಿ ರುಕ್ಮಿಣಿ ದೊಡ್ಡಮನಿ, ಉಪ ತಹಶೀಲ್ದಾರ್ ಆರ್. ರವಿ, ವಿಎ ಕೊಟ್ರೇಶ್, ಆರೋಗ್ಯ ನಿರೀಕ್ಷಕರಾದ ಉಮ್ಮಣ್ಣ, ನವೀನ್ ಅವರು ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸಿದರು.
ಪೋಷಕರ ವಾಗ್ವಾದ: ಪೋಷಕರು ತಮ್ಮ ಮಕ್ಕಳಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಮೊಬೈಲ್‌ಗೆ ಮೆಸೇಜ್ ಬಂದಿಲ್ಲ ಎಂದು ಉಪನ್ಯಾಸಕರು, ಆರೋಗ್ಯ ಇಲಾಖೆ ಸಿಬ್ಬಂದಿ ಜತೆ ವಾಗ್ವಾದ ನಡೆಸಿದರು. ತಹಶೀಲ್ದಾರ್ ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.