ಚನ್ನಗಿರಿ (ದಾವಣಗೆರೆ): ಮಟ್ಕಾ ಜೂಜು ಆಡಿಸುತ್ತಿದ್ದ ದೂರಿನ ಹಿನ್ನೆಲೆಯಲ್ಲಿ ಜಿಲ್ಲೆಯ ಚನ್ನಗಿರಿ ಪೊಲೀಸರು ವಿಚಾರಣೆಗಾಗಿ ಠಾಣೆಗೆ ಕರೆದೊಯ್ದ ಸಂದರ್ಭ ನಡೆದಿದ್ದ ಆದಿಲ್ ಖಲಿಂ ಉಲ್ಲಾ ಸಾವು ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಸೋಮವಾರ ಆರಂಭಿಸಿದರು.
ಸಿಐಡಿ ಡಿವೈಎಸ್‌ಪಿ ಕನಕಲಕ್ಷ್ಮೀ ನೇತೃತ್ವದ ತಂಡ ಚನ್ನಗಿರಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿರುವ ತುಣುಕುಗಳ ಪರಿಶೀಲಿಸಿ ಮಾಹಿತಿ ಕಲೆ ಹಾಕಿತು.
ಸದ್ಯ ಪಟ್ಟಣದಲ್ಲಿ ಪರಿಸ್ಥಿತಿ ಸಂಪೂರ್ಣ ಹತೋಟಿ ಯಲ್ಲಿದ್ದು, ಪೊಲೀಸ್ ಬಿಗಿ ಭದ್ರತೆ ಮುಂದುವರೆದಿದೆ.
ಮೂವರ ಅಮಾನತು: ಘಟನೆ ಸಂಬಂಧ ಡಿವೈಎಸ್‌ಪಿ ಪ್ರಶಾಂತ್ ಜಿ. ಮುನ್ನೋಳಿ, ಪೊಲೀಸ್ ಇನ್‌ಸ್ಪೆಕ್ಟರ್ ಬಿ. ನಿರಂಜನ್ ಹಾಗೂ ಅಪರಾಧ ವಿಭಾಗದ ಸಬ್ ಇನ್‌ಸ್ಪೆಕ್ಟರ್ ಆರೋನ್ ಅಖ್ತರ್ ಅವರನ್ನು ಅಮಾನತು ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಮಂತ್ರಿ ಜಿ.ಪರಮೇಶ್ವರ ಅವರು ಅಧಿಕಾರಿಗಳ ಅಮಾನತು ಮಾಡುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಪೂರ್ವವಲಯದ ಐಜಿಪಿ ತ್ಯಾಗರಾಜನ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.
ಮತ್ತೆ ಮೂವರು ವಶಕ್ಕೆ: ಠಾಣೆಗೆ ಮುತ್ತಿಗೆ ಹಾಕಿ ಹಾನಿಗೊಳಿಸಿದ ಸಂಬಂಧ ಸೋಮವಾರ ಮತ್ತೆ ಮೂವರನ್ನು ವಶಕ್ಕೆ ಪಡೆಯಲಾಗಿದ್ದು, ಈವರೆಗೆ 28 ಜನರನ್ನು ವಶಕ್ಕೆ ಪಡೆದಂತಾಗಿದೆ.
ಮಟ್ಕಾ ಜೂಜು ಆಡಿಸುತ್ತಿದ್ದ ದೂರಿನ ಮೇರೆಗೆ ಚನ್ನಗಿರಿ ಪೊಲೀಸರು ಆದಿಲ್ ಖಲಿಂ ಉಲ್ಲಾ ಅವರನ್ನು ಕಳೆದ ಶುಕ್ರವಾರ ರಾತ್ರಿ ವಿಚಾರಣೆಗಾಗಿ ಠಾಣೆಗೆ ಕರೆದೊಯ್ದ ಸಂದರ್ಭ ಅವರು ಮೃತಪಟ್ಟಿದ್ದರು. ಇದು ‘ಲಾಕಪ್ ಡೆತ್’ ಎಂದು ಸಂಬಂಧಿಕರು ದೂರಿದ್ದರು. ಶುಕ್ರವಾರ ತಡರಾತ್ರಿ ಉದ್ರಿಕ್ತರ ಗುಂಪು ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿ, ಕಲ್ಲು ತೂರಿದ್ದರಿಂದ 11 ಜನ ಸಿಬ್ಬಂದಿ ಗಾಯಗೊಂಡಿದ್ದರು. ಪೊಲೀಸ್ ವಾಹನಗಳನ್ನು ಜಖಂಗೊಳಿಸಿ ಹಾನಿ ಮಾಡಲಾಗಿತ್ತು.
ಕಾನೂನಿನಂತೆ ಕ್ರಮ: ಡಿಕೆಶಿ
ಬೆಂಗಳೂರು:ಚನ್ನಗಿರಿಯಲ್ಲಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾ ಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
‘ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದವರನ್ನು ರಾಜ್ಯ ಸರ್ಕಾರ ರಕ್ಷಿಸುತ್ತಿದೆ’ ಎಂಬ ಆರೋಪ ಕುರಿತು ಸುದ್ದಿಗಾರರಿಗೆ ಸೋಮವಾರ ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್ ಪಕ್ಷ ಸಂವಿಧಾನದ ಆಶಯದಂತೆ ಎಲ್ಲ ಸಮುದಾಯಗಳನ್ನು ಸಮಾನವಾಗಿ ಕಾಣುತ್ತದೆ’ ಎಂದರು.
ಪ್ರಕರಣದ ಬಗ್ಗೆ ಮುಖ್ಯಮಂತ್ರಿಯವರು ಪ್ರತ್ಯೇಕ ತನಿಖೆಗೆ ಆದೇಶ ನೀಡಿದ್ದಾರೆ. ತನಿಖೆ ನಡೆಯುತ್ತಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ. ಯಾರೂ ಕೂಡ ಕಾನೂನು ಕೈಗೆತ್ತಿ ಕೊಳ್ಳುವಂತಿಲ್ಲ. ಈ ವಿಚಾರದಲ್ಲಿ ಸರ್ಕಾರದ ನಿಲುವು ಅಚಲ. ಗೃಹ ಸಚಿವರು ಈಗಾಗಲೇ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.