ಚನ್ನಗಿರಿ: ‘ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ, ವಾಹನಗಳ ಧ್ವಂಸ ಮಾಡಿ, ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಧರ್ಮ ಜಾಗರಣಾ ಸಮಿತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
‘ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವುದು ಅವಮಾನವೀಯ. ಕಿಡಿಗೇಡಿಗಳು ಪಟ್ಟಣದ ಶಾಂತಿ ಕದಡಿದ್ದಾರೆ. ಇಂತಹ ಗೂಂಡಾ ಪ್ರವೃತ್ತಿಗೆ ಕಡಿವಾಣ ಹಾಕಬೇಕು. ತಾಲ್ಲೂಕಿನಲ್ಲಿ ಕ್ರಿಕೆಟ್ ಬೆಟ್ಟಿಂಗ್, ಮಟ್ಕಾ, ಇಸ್ಟೀಟ್ ಜೂಜಾಟ ಅವ್ಯಾಹತವಾಗಿ ನಡೆಯುತ್ತಿವೆ. ಇದನ್ನು ನಿಯಂತ್ರಣ ಮಾಡುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ. ಘಟನೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.
ಪಟ್ಟಣದ ಊರು ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಬಸ್ ನಿಲ್ದಾಣದ ಮೂಲಕ ತಹಶೀಲ್ದಾರ್ ಕಚೇರಿಯಲ್ಲಿ ಸಮಾರೋಪಗೊಂಡಿತು. ಬಳಿಕ ಗ್ರೇಡ್-2 ತಹಶೀಲ್ದಾರ್ ರುಕ್ಮಿಣಿಬಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.
ವಿಎಚ್‌ಪಿ ಜಿಲ್ಲಾ ಸಂಚಾಲಕರಾದ ಸತೀಶ್ ಪೂಜಾರಿ, ಮಂಜುನಾಥ್, ಮುಖಂಡರಾದ ಎಚ್.ಎಸ್. ಶಿವಕುಮಾರ್, ಬುಳ್ಳಿ ಗಣೇಶ್, ಚಿಕ್ಕಪ್ಪ, ನವೀನ್ ಕುಮಾರ್, ಎನ್. ರವಿಚಂದ್ರ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.