ದಾವಣಗೆರೆ: ‘ರಾಜ್ಯದಲ್ಲಿ ಅಕ್ಟೋಬರ್ ತಿಂಗಳಲ್ಲಿ ಸರಾಸರಿ 10.4 ಸೆಂ.ಮೀ ವಾಡಿಕೆ ಮಳೆ ಆಗಬೇಕಿತ್ತು. ಆದರೆ, 16.6 ಸೆಂ.ಮೀ (ಶೇ 61ರಷ್ಟು ಹೆಚ್ಚು) ಮಳೆ ಸುರಿದಿದೆ. ಅಂದಾಜು 56,993 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಗೀಡಾಗಿದೆ. ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಜಂಟಿ ಸಮೀಕ್ಷೆ ಇನ್ನು 3–4 ದಿನಗಳಲ್ಲಿ ಪೂರ್ಣಗೊಳ್ಳಲಿದ್ದು, 15 ದಿನಗಳಲ್ಲಿ ಪರಿಹಾರ ವಿತರಿಸುತ್ತೇವೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಜಿಲ್ಲೆಯ ಜಗಳೂರು ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ್ದ ಅವರು ಮಳೆಯಿಂದ ಹಾನಿಗೀಡಾದ ಬೆಳೆ ಹಾಗೂ ಕುಸಿದ ಮನೆಗಳನ್ನು ಶುಕ್ರವಾರ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
‘ಸಮೀಕ್ಷೆ ಪೂರ್ಣಗೊಂಡ ನಂತರವೇ ಬೆಳೆ ಹಾನಿ ಪ್ರಮಾಣದ ನಿಖರ ಅಂಕಿ ಅಂಶ ತಿಳಿಯಲಿದೆ. ಅಂದಾಜಿಸಿದ ಪ್ರಮಾಣಕ್ಕಿಂತ ಹೆಚ್ಚು ಪ್ರದೇಶದಲ್ಲಿ ಬೆಳೆ ಹಾನಿಯಾಗಿರುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ, ಹೆಚ್ಚು ಮಳೆಯಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಅ.26ರಂದು ಸಭೆ ನಡೆಸಲಾಗುವುದು’ ಎಂದು ಹೇಳಿದರು.
‘ಮುಂಗಾರಿನಲ್ಲಿ 1.18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಪರಿಹಾರ ವಿತರಿಸಲಾಗುತ್ತಿದೆ. ಹಿಂಗಾರಿನಲ್ಲಿ ಒಟ್ಟು 21 ಜನ ಮೃತಪಟ್ಟಿದ್ದಾರೆ. ಈ ಪೈಕಿ 9 ಮಂದಿ ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ. ಮುಂಗಾರು, ಹಿಂಗಾರು ಅವಧಿಯಲ್ಲಿ ಒಟ್ಟು 121 ಜನ ಅಸುನೀಗಿದ್ದಾರೆ. ಮುಂಗಾರು ಅವಧಿಯಲ್ಲಿ 2,589 ಹಾಗೂ ಹಿಂಗಾರು ಅವಧಿಯಲ್ಲಿ 120 ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ’ ಎಂದು ಮಾಹಿತಿ ನೀಡಿದರು.
‘ಬೆಳೆ ಹಾನಿಗೆ ಕೇಂದ್ರ ಸರ್ಕಾರ ನೀಡುವ ಪರಿಹಾರದ ಮೊತ್ತ ಕಡಿಮೆ ಇದೆ. ಬೆಳೆ ಹಾನಿ ಮಾನದಂಡಗಳನ್ನು ಪರಿಷ್ಕರಿಸಿ ಪರಿಹಾರದ ಮೊತ್ತ ಹೆಚ್ಚಿಸಬೇಕು ಎಂದು ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರನ್ನು 6–8 ತಿಂಗಳಿಂದ ಒತ್ತಾಯಿಸುತ್ತಿದ್ದೇವೆ. ಕೇಂದ್ರ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಬೇಕು’ ಎಂದು ಒತ್ತಾಯಿಸಿದರು.
‘ಬೆಳೆ ಹಾನಿ, ಜೀವ ಹಾನಿ ಹಾಗೂ ಮನೆ ಬಿದ್ದು ಹೋಗಿದ್ದಲ್ಲಿ ತಕ್ಷಣವೇ ಪರಿಹಾರ ನೀಡಲು ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರ ಖಾತೆಗಳಲ್ಲಿ ₹ 666 ಕೋಟಿಯಷ್ಟು ಮೊತ್ತವಿದೆ. ಪ್ರಕೃತಿ ವಿಕೋಪ ಎದುರಿಸಲು ಅನುದಾನದ ಕೊರತೆ ಇಲ್ಲ. ತ್ವರಿತವಾಗಿ ಪರಿಹಾರ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.