ADVERTISEMENT

ಮುರುಘಾ ಮಠ: ಮೇಲ್ಮನವಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2023, 16:50 IST
Last Updated 23 ಆಗಸ್ಟ್ 2023, 16:50 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಚಿತ್ರದುರ್ಗದ ‘ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ’ಕ್ಕೆ (ಎಸ್‌ಜೆಎಂ) ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿದ ಆದೇಶವನ್ನು ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿದ್ದ ಮೇಲ್ಮನವಿಯ ವಿಚಾರಣೆ ಮುಕ್ತಾಯಗೊಳಿಸಿರುವ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿದೆ.

ಈ ಕುರಿತಂತೆ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಲಾದ ಒಟ್ಟು ಏಳು ಮೇಲ್ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ಮುಕ್ತಾಯಗೊಳಿಸಿ ತೀರ್ಪು ಕಾಯ್ದಿರಿಸಿರುವುದಾಗಿ ಆದೇಶಿಸಿತು.

ಪ್ರಕರಣವೇನು?

ADVERTISEMENT

 ‘ಪೋಕ್ಸೊ ಪ್ರಕರಣದ ಆರೋಪಿ ಶಿವಮೂರ್ತಿ ಶರಣರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಹೀಗಾಗಿ, ಹಿಂದಿದ್ದ ಬಿಜೆಪಿ ನೇತೃತ್ವದ ಸರ್ಕಾರವು ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್.ವಸ್ತ್ರದ ಅವರನ್ನು  ಮಠದ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿತ್ತು. ಅವರು 2022ರ ಡಿಸೆಂಬರ್ 15ರಂದು ಅಧಿಕಾರ ಸ್ವೀಕರಿಸಿದ್ದರು.

ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಮಠದ ತಾತ್ಕಾಲಿಕ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು, ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಆಡಳಿತಾಧಿಕಾರಿ ನೇಮಕವನ್ನು ರದ್ದುಪಡಿಸಿತ್ತು.

ಸದ್ಯ ಚಿತ್ರದುರ್ಗ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ಮಠದ ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ‘ಮೇಲ್ಮನವಿ ಮೇಲಿನ ಅಂತಿಮ ತೀರ್ಪು ಬರುವ ತನಕ ಈ ಆದೇಶ ಜಾರಿಯಲ್ಲಿರುತ್ತದೆ‘ ಎಂದು ವಿಚಾರಣೆ ನಡೆಸುತ್ತಿರುವ ವಿಭಾಗೀಯ ನ್ಯಾಯಪೀಠವು 2023ರ ಜುಲೈ 03ರಂದು ಆದೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.