ADVERTISEMENT

ಕೃಷಿ ಕಾಲೇಜು ಸ್ಥಾಪನೆಗೆ ಸಿಗದ ಅನುಮತಿ: ಶಿವಾಚಾರ್ಯ ಸ್ವಾಮೀಜಿ ಬೇಸರ

​ಪ್ರಜಾವಾಣಿ ವಾರ್ತೆ
Published 13 ಜನವರಿ 2024, 15:38 IST
Last Updated 13 ಜನವರಿ 2024, 15:38 IST
ಹೊನ್ನಾಳಿಯ ಹಿರೇಕಲ್ಮಠದಲ್ಲಿ ಎಳ್ಳಮಾವಾಸ್ಯೆ ಪ್ರಯುಕ್ತ ನಡೆದ ಧರ್ಮಸಭೆಯಲ್ಲಿ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು
ಹೊನ್ನಾಳಿಯ ಹಿರೇಕಲ್ಮಠದಲ್ಲಿ ಎಳ್ಳಮಾವಾಸ್ಯೆ ಪ್ರಯುಕ್ತ ನಡೆದ ಧರ್ಮಸಭೆಯಲ್ಲಿ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು   

ಹೊನ್ನಾಳಿ: ಸಮಾಜಮುಖಿಯಾಗಿ ಕೆಲಸ ಮಾಡುವವರಿಗೆ ಸ್ಥಾನಮಾನಗಳು ಅರಸಿ ಬರುತ್ತವೆ ಎಂದು ಪಟ್ಟಣದ ಹಿರೇಕಲ್ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.

ಪಟ್ಟಣದ ಹಿರೇಕಲ್ಮಠದಲ್ಲಿ ಎಳ್ಳಮಾವಾಸ್ಯೆ ಪ್ರಯುಕ್ತ ಗುರುವಾರ ಹಮ್ಮಿಕೊಂಡಿದ್ದ ಗುರು ಚನ್ನೇಶ್ವರ ಬೆಳ್ಳಿ ರಥೋತ್ಸವ ಮತ್ತು ಸಂಸ್ಕೃತಿ, ಸಂಸ್ಕಾರ ಕಾರ್ಯಕ್ರಮದ ಧರ್ಮಸಭೆಯಲ್ಲಿ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ಹೊನ್ನಾಳಿ ತಾಲ್ಲೂಕು ಬಗರ್‌ಹುಕುಂ ಸಮಿತಿ ಸದಸ್ಯ ಸಣ್ಣಕ್ಕಿ ಬಸವನಗೌಡ ಹಾಗೂ ಪುಷ್ಪಾ ರೇವಣಸಿದ್ದಪ್ಪ ಮತ್ತು ಕಸಬಾ ಸೊಸೈಟಿ ಅಧ್ಯಕ್ಷ ಕುಮಾರಸ್ವಾಮಿ ಅವರನ್ನು ಮಠದ ಪರವಾಗಿ ಗೌರವಿಸಿದರು.

ADVERTISEMENT

‘ತಮಿಳುನಾಡು, ಮಹಾರಾಷ್ಟ್ರ ರಾಜ್ಯಗಳಲ್ಲಿ 150ಕ್ಕೂ ಹೆಚ್ಚು ಖಾಸಗಿ ಕೃಷಿ ಕಾಲೇಜುಗಳಿಗೆ ಅನುಮತಿ ನೀಡಲಾಗಿದೆ. ಆದರೆ, ನಮ್ಮ ರಾಜ್ಯದಲ್ಲಿ ಕೃಷಿ ಕಾಲೇಜು ತೆರೆಯಲು ಖಾಸಗಿಯವರಿಗೆ ಯಾಕೆ ಅನುಮತಿ ಸಿಗುತ್ತಿಲ್ಲ’ ಎಂದು ಅವರು ಪ್ರಶ್ನಿಸಿದರು.

ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮಠದಲ್ಲಿ ಕೃಷಿ ಕಾಲೇಜು ತೆರೆಯಲು ಅನುಮತಿಗಾಗಿ ಪ್ರಯತ್ನಿಸುತ್ತಿದ್ದೇವೆ. ರಾಜಕೀಯ ಇಚ್ಛಾಶಕ್ತಿಯ ಕೊರತೆಯ ಕಾರಣ ಕಾಲೇಜು ಪ್ರಾರಂಭಿಸಲು ಅನುಮತಿ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಬರಗಾಲದ ಪ್ರಯುಕ್ತ ಕೋಟಿ ದೀಪೋತ್ಸವ, ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳನ್ನು ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ ಎಂದರು.

ಮಠದ ವತಿಯಿಂದ ನೂತನವಾಗಿ ಟೈಲರಿಂಗ್ ಕೋರ್ಸ್‍ ಪ್ರಾರಂಭಿಸಿದ್ದು, ಮಹಿಳೆಯರು ಇದರ ತರಬೇತಿ ಪಡೆದು ಆರ್ಥಿಕ ಸ್ವಾವಲಂಬಿಗಳಾಗಬೇಕು ಎಂದು ಕಾಂಗ್ರೆಸ್‌ ಮಹಿಳಾ ವಿಭಾಗದ ತಾಲ್ಲೂಕು ಘಟಕದ ಅಧ್ಯಕ್ಷೆ ಪುಷ್ಪಾ ರೇವಣಸಿದ್ದಪ್ಪ ಸಲಹೆ ನೀಡಿದರು.

ಮಠದ ವ್ಯವಸ್ಥಾಪಕ ಎಂ.ಪಿ.ಎಂ. ಚನ್ನಬಸಯ್ಯ ಮಾತನಾಡಿ, ‘ರಟ್ಟೆಹಳ್ಳಿ ತಾಲ್ಲೂಕಿನ ಹಳ್ಳೂರಿನ ಎಂ.ಡಿ.ಶಂಕರನಹಳ್ಳಿಯಲ್ಲಿ ಜ.14ರಿಂದ 16ರವರೆಗೆ  ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಅವರ ಮೌನ ಇಷ್ಟಲಿಂಗ ಪೂಜಾನುಷ್ಠಾನದ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಬಗರ್‌ಹುಕುಂ ಸಮಿತಿ ತಾಲ್ಲೂಕು ಘಟಕದ ಸದಸ್ಯ ಸಣ್ಣಕ್ಕಿ ಬಸವನಗೌಡ ಮಾತನಾಡಿದರು. ರೇವಣಸಿದ್ದಪ್ಪ, ಪೂಜಾ, ಮರಿ ಹಾಲಸ್ವಾಮಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.