ದಾವಣಗೆರೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎರಡುವರೆ ವರ್ಷಗಳಾದ ಬಳಿಕ ಮುಖ್ಯಮಂತ್ರಿಯಾಗುವುದು ಗ್ಯಾರಂಟಿ ಎಂದು ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಹೇಳಿದರು.
ದಾವಣಗೆರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ‘ಮುಖ್ಯಮಂತ್ರಿ ಆಯ್ಕೆ ವಿಚಾರ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಡಿ.ಕೆ.ಶಿವಕುಮಾರ್ ಅವರು ಪಕ್ಷಕ್ಕಾಗಿ ದುಡಿದಿದ್ದಾರೆ. ಇದರಲ್ಲಿ ಯಾವುದೇ ಗೊಂದಲವಿಲ್ಲ. ಮುಖ್ಯಮಂತ್ರಿ ಆಯ್ಕೆ ಕುರಿತು ಯಾವುದೇ ಒಪ್ಪಂದವಾಗಿಲ್ಲ. ಹೈಕಮಾಂಡ್‌ನಲ್ಲಿ ಏನು ತೀರ್ಮಾನವಾಗಿದೆಯೋ ಗೊತ್ತಿಲ್ಲ’ ಎಂದು ತಿಳಿಸಿದರು.
‘ಸಿದ್ದರಾಮಯ್ಯ ಉತ್ತಮ ಯೋಜನೆ ಕೊಟ್ಟಿದ್ದಾರೆ. 5 ಗ್ಯಾರಂಟಿಗಳು ಜನಪ್ರಿಯವಾಗಿವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನಾದರೂ ಗೆಲ್ಲುತ್ತೇವೆ. ಸರ್ಕಾರ ಚೆನ್ನಾಗಿ ನಡೆಯುತ್ತಿದೆ ಯಾವುದೇ ಗೊಂದಲವಿಲ್ಲ’ ಎಂದು ಸ್ಪಷ್ಟಪಡಿಸಿದರು.
‘ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅದನ್ನು ಕಾಲವೇ ನಿರ್ಣಯಿಸುತ್ತದೆ. ಈಗ ಅವೆಲ್ಲಾ ಯಾಕೆ?. ನಾವು ಯಾರ ಪರವೂ ಇಲ್ಲ. ವಿರೋಧವೂ ಇಲ್ಲ. 135 ಶಾಸಕರು ಒಗ್ಗಟ್ಟಾಗಿ ಇದ್ದೇವೆ. ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಎಸ್.ಎಸ್.ಮಲ್ಲಿಕಾರ್ಜುನ್, ಸತೀಶ್ ಜಾರಕಿಹೊಳಿ, ರಾಹುಲ್‌ಗಾಂಧಿ ಅವರ ಜೊತೆಯಲ್ಲೂ ಇದ್ದೇವೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.