ದಾವಣಗೆರೆ: ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಹೈಕಮಾಂಡ್‌ಗೆ ದೂರು ನೀಡುವುದಿಲ್ಲ ಎಂದು ಬಿಜೆಪಿ ಸಂಸದಿಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ ಎಂದರು.
ರಾಜ್ಯದಲ್ಲಿ ಬಿಜೆಪಿ ಪರ ಒಳ್ಳೆಯ ವಾತಾವರಣ ಇದ್ದು,. ವಿಜಯೇಂದ್ರ ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ರಾಜ್ಯದಲ್ಲಿ ಯುವಕರು ಕುಣಿದು ಕುಪ್ಪಳಿಸುತ್ತಿದ್ದಾರೆ. ಅದು ಒಂದು ದೊಡ್ಡ ಶಕ್ತಿಯಾಗಿದೆ. 28 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನ ಗೆಲ್ಲಿಸುವುದು ನಮ್ಮ ಗುರಿಯಾಗಿದ್ದು, ಮುಂದಿನ ವಾರದಿಂದ ಇಬ್ಬರೂ ಪ್ರವಾಸ ಆರಂಭಿಸುತ್ತೇವೆ ಎಂದು ತಿಳಿಸಿದರು.
ಹಿಜಾಬ್ ವಿಚಾರದಲ್ಲಿ ನಮ್ಮೆಲ್ಲರ ಒತ್ತಾಯಕ್ಕೆ ಮಣಿದು ಸಿದ್ದರಾಮಯ್ಯ ಅವರು ಹೇಳಿಕೆ ವಾಪಸ್ ಪಡೆದಿರುವುದು ಒಳ್ಳೆಯ ಸಂಗತಿ. ಈಗಲಾದರೂ ಸದ್ಭುದ್ಧಿ ಬಂದಿದೆ ಎಂದರು.
ನಾವು ಅಲ್ಪಸಂಖ್ಯಾತರ ವಿರೋಧಿಗಳಲ್ಲ. ಹಿಂದೂ ಮುಸ್ಲಿಂ, ಕ್ರಿಶ್ಚಿಯನ್ನರು ಒಂದೇ ತಾಯಿ ಮಕ್ಕಳಂತೆ ಬಾಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ಹತ್ತಾರು ಬಾರಿ ಹೇಳಿದ್ದಾರೆ. ಈ ನಿಟ್ಟಿನಲ್ಲಿ ಜಾತಿಯ ವಿಷಬೀಜ ಬಿತ್ತುವ ಕೆಲಸವನ್ನು ಸಿದ್ದರಾಮಯ್ಯ ಬಿಡಬೇಕು. ಇದರಿಂದ ಅವರಿಗೆ ಯಾವ ಲಾಭವೂ ಆಗುವುದಿಲ್ಲ ಎಂದು ಹೇಳಿದರು.
ಜಾತಿ ಗಣತಿ ಬೇಡ ಎಂಬ ಭಾವನೆ ಬಹುತೇಕರಲ್ಲಿ ಬಂದಿದೆ. ವೈಜ್ಞಾನಿಕವಾಗಿ ಸಮೀಕ್ಷೆ ಆಗಬೇಕು ಎಂಬ ಭಾವನೆ ಇದೆ. ನಾವು ಕೂಡಾ ಅದನ್ನೇ ಹೇಳುತ್ತೇವೆ. ಇನ್ನೊಮ್ಮೆ ಸಮೀಕ್ಷೆ ಆಗಲಿ ಎಂದು ಆಗ್ರಹಿಸಿದರು.
ಅಳೆದು ತೂಗಿ ರಾಜ್ಯ ಬಿಜೆಪಿಯ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇಲ್ಲಿ ಯಾರ ಪರ, ವಿರೋಧವೂ ಇಲ್ಲ. ಪದಾಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಲಿ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.