ಚನ್ನಗಿರಿ: ಚನ್ನಗಿರಿ ಆಸ್ಪತ್ರೆಯ ವೈದ್ಯರು ಸರಿಯಾಗಿ ಚಿಕಿತ್ಸೆ ನೀಡದ ಕಾರಣ, ಆತ್ಮಹತ್ಯೆಗೆ ಯತ್ನಿಸಿದ್ದ ತಾಲ್ಲೂಕಿನ ಜಯಂತಿ ನಗರ ಗ್ರಾಮದ ಯುವಕ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಮುಂದೆ ಶವ ಇಟ್ಟು ಪೋಷಕರು ಬುಧವಾರ ಪ್ರತಿಭಟನೆ ನಡೆಸಿದರು.
ಜಯಂತಿ ನಗರದ ಆಕಾಶ್ (20) ಮೃತ ಯುವಕ.
‘ನಲ್ಲೂರು ಗ್ರಾಮದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಚನ್ನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿನ ವೈದ್ಯರಾಗಲೀ, ನರ್ಸ್‌ಗಳಾಗಲೀ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದೇ ನಿರ್ಲಕ್ಷ್ಯ ಮಾಡಿದ್ದಾರೆ. ಯುವಕನನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿನ ವೈದ್ಯರು ಯುವಕ ಮೃತಪಟ್ಟಿದ್ದಾನೆ ಎಂದು ಹೇಳಿ ವಾಪಸ್ ಕಳುಹಿಸಿದ್ದಾರೆ. ಈ ಘಟನೆಗೆ ಚನ್ನಗಿರಿ ವೈದ್ಯರ ನಿರ್ಲಕ್ಷ್ಯವೇ ಕಾರಣ’ ಎಂದು ಮೃತ ಯುವಕನ ಚಿಕ್ಕಪ್ಪ ಶ್ರೀಕಾಂತ್ ದೂರಿದರು.
ಚನ್ನಗಿರಿ ಠಾಣೆಯ ಪಿಐ ಬಾಲಚಂದ್ರ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪ್ರತಿಭಟನಕಾರರ ಮನವೊಲಿಸಿದ ಬಳಿಕ ಪೋಷಕರು ಪ್ರತಿಭಟನೆ ಹಿಂಪಡೆದರು.
ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಎಂ. ಚಂದ್ರಪ್ಪ ಮಾತನಾಡಿ, ‘ಆಸ್ಪತ್ರೆಗೆ ಬಂದಿದ್ದ ಯುವಕನನ್ನು ಇಲ್ಲಿನ ವೈದ್ಯರು ತಪಾಸಣೆ ಮಾಡಿದ್ದರು. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಕಾರಣ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ಪೋಷಕರಿಗೆ ತಿಳಿಸಲಾಗಿತ್ತು. ಆದರೂ ವೈದ್ಯರ ನಿರ್ಲಕ್ಷ್ಯ ಎಂದು ಆರೋಪಿಸಿ ಪ್ರತಿಭಟನೆ ಮಾಡಿದ್ದಾರೆ. ಆಸ್ಪತ್ರೆಯ ಸಿ.ಸಿ.ಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸುತ್ತೇವೆ. ತಪ್ಪು ಮಾಡಿದ್ದು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.