ADVERTISEMENT

ಬೆದರಿಕೆ: ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ

​ಪ್ರಜಾವಾಣಿ ವಾರ್ತೆ
Published 26 ಜೂನ್ 2024, 20:00 IST
Last Updated 26 ಜೂನ್ 2024, 20:00 IST
ಹುಬ್ಬಳ್ಳಿ ವಿಮಾನ ನಿಲ್ದಾಣ –ಪ್ರಜಾವಾಣಿ ಚಿತ್ರ/ಗೋವಿಂದರಾಜ ಜವಳಿ
ಹುಬ್ಬಳ್ಳಿ ವಿಮಾನ ನಿಲ್ದಾಣ –ಪ್ರಜಾವಾಣಿ ಚಿತ್ರ/ಗೋವಿಂದರಾಜ ಜವಳಿ   

ಹುಬ್ಬಳ್ಳಿ: ಹುಬ್ಬಳ್ಳಿ, ಕಲಬುರಗಿ ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕರಿಗೆ ಸೇರಿ ದೇಶದ ಪ್ರಮುಖ 113 ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕರಿಗೆ ಎರಡು ದಿನಗಳ ಹಿಂದೆ ಇ–ಮೇಲ್‌ ಮೂಲಕ ಜೀವ ಬೆದರಿಕೆ ಸಂದೇಶ ರವಾನೆಯಾಗಿದೆ. ಇದರ ಪರಿಣಾಮ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ನಿಲ್ದಾಣ ಆವರಣ ಪ್ರವೇಶಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ಮತ್ತು ಸಾರ್ವಜನಿಕರನ್ನು ಪರಿಶೀಲಿಸಲಾಗುತ್ತಿದೆ. ಬಾಂಬ್‌ ಬೆದರಿಕೆ ತಪಾಸಣಾ ದಳ, ಬಾಂಬ್‌ ನಿಷ್ಕ್ರಿಯ ದಳ, ಶ್ವಾನ ದಳ ಸಿಬ್ಬಂದಿ ಅಲ್ಲದೇ ಪೊಲೀಸ್‌ ಅಧಿಕಾರಿಗಳು, ಆಂತರಿಕ ಭದ್ರತಾ ಸಿಬ್ಬಂದಿ ಹಾಗೂ ಗುಪ್ತಚರ ಇಲಾಖೆ ಸಿಬ್ಬಂದಿ ‌ನಿಗಾ ವಹಿಸಿದ್ದಾರೆ.

‘ದೇಶದ ಬಹುತೇಕ ಪ್ರಮುಖ ವಿಮಾನ ನಿಲ್ದಾಣಗಳಿಗೆ LongLivepalestine@dnmx.org ಎಂಬ ಇ–ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿದೆ. ನಾವು ತಕ್ಷಣವೇ ಬಾಂಬ್‌ ತಪಾಸಣಾ ದಳ ಮತ್ತು ಭದ್ರತಾ ಸಿಬ್ಬಂದಿ ಜೊತೆ ಸಭೆ ನಡೆಸಿ, ನಿಲ್ದಾಣಕ್ಕೆ ಬಿಗಿ ಭದ್ರತೆ ಒದಗಿಸಿದ್ದೇವೆ. ಬೆದರಿಕೆ ಸಂದೇಶ ಬಂದ ಇ–ಮೇಲ್‌ ಐಡಿಯ ಮಾಹಿತಿ ಮತ್ತು ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಪೊಲೀಸರಿಗೆ ನೀಡಿ, ಪ್ರಕರಣ ದಾಖಲಿಸಿದ್ದೇವೆ’ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕ ರೂಪೇಶಕುಮಾರ ಶ್ರೀಪಾದ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

‘ಇ–ಮೇಲ್ ಎಲ್ಲಿಂದ ಬಂದಿದೆ ಮತ್ತು ಯಾರ ಕೃತ್ಯ ಎಂಬುದನ್ನು ಪತ್ತೆ ಮಾಡಲು ತನಿಖೆ ಕೈಗೊಂಡಿದ್ದೇವೆ. ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಬಿಗಿ ಬಂದೋಬಸ್ತ್ ಮಾಡಲಾಗಿದೆ’ ಎಂದು ಹುಬ್ಬಳ್ಳಿ–ಧಾರವಾಡ ಪೊಲೀಸ್‌ ಕಮಿಷನರ್‌ ರೇಣುಕಾ ಸುಕುಮಾರ್‌ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.