ADVERTISEMENT

ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಪ್ರಯತ್ನ: ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2024, 15:54 IST
Last Updated 15 ಆಗಸ್ಟ್ 2024, 15:54 IST
ಹುಬ್ಬಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿ ವತಿಯಿಂದ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು
ಹುಬ್ಬಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿ ವತಿಯಿಂದ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು   

ಹುಬ್ಬಳ್ಳಿ: ‘ಇಲ್ಲಿನ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಹೆಸರಿಡುವಂತೆ ಕೇಂದ್ರದ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದರು.

ನಗರದಲ್ಲಿ ಚನ್ನಮ್ಮ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಜಯಂತಿ ಅಂಗವಾಗಿ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ವಿವಿಧ ಕ್ಷೇತ್ರಗಳ ಸಾಧಕರಿಗೆ ಸಂಗೊಳ್ಳಿ ರಾಯಣ್ಣ ಹಾಗೂ ರಾಣಿ ಚನ್ನಮ್ಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರಿಡುವಂತೆ ಹಲವು ವರ್ಷಗಳಿಂದ ಹೋರಾಟ ನಡೆದುಕೊಂಡು ಬಂದಿದೆ. ರಾಜ್ಯ ಸರ್ಕಾರವು ಈ ಬಗ್ಗೆ ಕೇಂದ್ರ ಸರ್ಕಾರದ ಯಾವ ಇಲಾಖೆಗೆ ಮನವಿ ಸಲ್ಲಿಸಿದೆ? ಸದ್ಯ ಯಾವ ಹಂತದಲ್ಲಿದೆ ಎಂಬುದರ ಕುರಿತು ಶಾಸಕರು ಮಾಹಿತಿ ನೀಡಿದರೆ, ಹೆಸರು ನಾಮಕರಣ ಮಾಡಿಸಲು ನಾನು ಬದ್ಧ’ ಎಂದು ಭರವಸೆ ನೀಡಿದರು.

ADVERTISEMENT

ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ‘ರಾಯಣ್ಣ ಅವರ ರಾಷ್ಟ್ರಪ್ರೇಮ ಅಜರಾಮರ. ಅವರಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಇತ್ತೀಚಿನ ದಿನಗಳಲ್ಲಿ ಸಂಗೊಳ್ಳಿ ರಾಯಣ್ಣ ಅವರ ಇತಿಹಾಸವನ್ನು ತಿರುಚಲು ಕೆಲವರು ಯತ್ನಿಸುತ್ತಿದ್ದು, ಅಂತಹವರನ್ನು ದೂರ ಇಡಬೇಕು’ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ಶಾಸಕ ಎನ್.ಎಚ್. ಕೋನರಡ್ಡಿ, ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಮುತ್ತಣ್ಣವರ ಮಾತನಾಡಿದರು. ಮನಸೂರು ಮಠದ ಬಸವರಾಜ ದೇವರು, ಮನಗುಂಡಿಯ ಬಸವಾನಂದ ಸ್ವಾಮೀಜಿ, ನಾಗೇಶ ಕಲಬುರ್ಗಿ, ಮಲ್ಲಿಕಾರ್ಜುನ ಸಾವಕಾರ, ವಿಜಯಕುಮಾರ ಅಪ್ಪಾಜಿ, ಮಲ್ಲಿಕಾರ್ಜುನ ತಾಲೂರ, ಅಲ್ತಾಫ್ ಹಳ್ಳೂರ, ಶಿವಾನಂದ ಕರಿಗಾರ ಇತರರು ಇದ್ದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.