ಹುಬ್ಬಳ್ಳಿ: ‘ದಸರಾ ರಜೆಯನ್ನು ಅ.30ರವರೆಗೆ ವಿಸ್ತರಿಸಬೇಕು ಎಂದು ಸರ್ಕಾರಕ್ಕೆ ಪತ್ರ ಬರೆಯಲಾಗಿದೆ’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಮೊದಲು ಅ. 2ರಿಂದ ಅ. 30 ರವರೆಗೆ ಶೈಕ್ಷಣಿಕ ವರ್ಷದ ಮೊದಲ ಅವಧಿಯ (ದಸರಾ) ರಜೆ ಸಿಗುತ್ತಿತ್ತು. ಆದರೆ, ಅಧಿಕಾರಿಗಳು ತಮಗೆ ಬೇಕಾದ ಹಾಗೆ ಅಲ್ಲಲ್ಲಿ, ರಜೆಗಳನ್ನು ಹಂಚಿಕೆ ಮಾಡಿರುವುದರಿಂದ ಸಮಸ್ಯೆ ಎದುರಾಗಿದೆ. ಹಿಂದಿನ ಪದ್ಧತಿಯಂತೆಯೇ, ರಜೆ ಸೌಲಭ್ಯ ಮುಂದುವರಿಸಬೇಕು ಎಂದು ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಲಾಗಿದೆ’ ಎಂದರು.
ಇದೇ ಸಂದರ್ಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಜೊತೆ ದೂರವಾಣಿ ಮೂಲಕ ಸಂಪರ್ಕಿಸಿದ ಹೊರಟ್ಟಿ, ದಸರಾ ರಜೆಯನ್ನು ಅ. 30ರವರೆಗೆ ವಿಸ್ತರಿಸುವಂತೆ ವಿನಂತಿಸಿದರು.
‘ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ ಆಲಿಸಲು ಬೆಳಗಾವಿಯ ಸುವರ್ಣ ಸೌಧದಲ್ಲಿ ಕನಿಷ್ಠ 15 ದಿನಗಳಾದರೂ ಚಳಿಗಾಲ ಅಧಿವೇಶನ ನಡೆಸಬೇಕು’ ಎಂದು ಒತ್ತಾಯಿಸಿ ಮುಖ್ಯಮಂತ್ರಿಗೆ ಪತ್ರ ಬರೆಯುವುದಾಗಿ ಹೊರಟ್ಟಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.