ಧಾರವಾಡ: ‘ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಇವೆಲ್ಲವು ಒಂದೇ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿರಬೇಕು. ಇವೆಲ್ಲವನ್ನು ಒಟ್ಟುಗೂಡಿಸಿ ಒಂದು ಸಮಗ್ರ ವಿಶ್ವವಿದ್ಯಾಲಯ ಸ್ಥಾಪಿಸಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯಪಟ್ಟರು.
ಕೃಷಿ ವಿಶ್ವವಿದ್ಯಾಲಯದಲ್ಲಿ ಭಾನುವಾರ ಕೃಷಿ ಮೇಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ ‘ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಇವೆಲ್ಲವೂ ಒಂದೇ ಕಡೆ ಇದ್ದರೆ ಅನುಕೂಲವಾಗುತ್ತದೆ. ಅಂತರ್‌ಶಿಸ್ತೀಯ ಅಧ್ಯಯನ,ಪ್ರಾಯೋಗಿಕವಾಗಿ ವಿಷಯಗಳ ಮನನ ಎಲ್ಲದಕ್ಕೂ ಸಹಕಾರಿಯಾಗುತ್ತದೆ. ಕೃಷಿ ವಿಶ್ವವಿದ್ಯಾಲಯಗಳು ರೈತರಿಗಾಗಿ ಮೂರು ಅಥವಾ ಆರು ತಿಂಗಳಿಗೊಮ್ಮೆ ಕಮ್ಮಟ ಏರ್ಪಡಿಸಬೇಕು’ ಎಂದು ಸಲಹೆ ನೀಡಿದರು.
‘ಕೃಷಿ ಕಾರ್ಮಿಕರ ಕೊರತೆ, ಬೆಳೆಗಳಿಗೆ ಕಡಿಮೆ ಬೆಲೆ ಮೊದಲಾದ ಕಾರಣಗಳಿಂದ ಕೆಲವು ರೈತರು ಕೃಷಿಯಿಂದ ವಿಮುಖರಾಗಿದ್ದಾರೆ, ಜಮೀನು ಮಾರಾಟ ಮಾಡಿದ್ದಾರೆ. ರೈತರು ಬೆಳೆದ ಎಲ್ಲ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಸಿಗುವಂತೆ ಮಾಡಬೇಕು. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಎನ್‌ಆರ್‌ಇಜಿ) ಕಾರ್ಮಿಕರು ಜಮೀನಿನಲ್ಲಿ ಕೆಲಸ ಮಾಡಿ ರೈತರಿಂದ ಪಗಾರ ಪಡೆಯುವಂತೆ ಮಾಡಬೇಕು. ರೈತರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಪ್ರಯತ್ನಿಸಬೇಕು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.