ಹುಬ್ಬಳ್ಳಿ: ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಜುಲೈ 12ರಂದು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಘಟಕದ ಕಾರ್ಯದರ್ಶಿ ಸಚಿನ ಕುಳಗೇರಿ ಆಗ್ರಹಿಸಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ನಗರ ಪ್ರದೇಶಗಳಿಗೆ ಬರುತ್ತಾರೆ. ಸರಿಯಾದ ಸಮಯಕ್ಕೆ ಬಸ್ ಪಾಸ್ ವಿತರಣೆ ಮಾಡದ ಕಾರಣ ಬಡ ವಿದ್ಯಾರ್ಥಿಗಳು ಪ್ರತಿ ದಿನ ನೂರಾರು ರೂಪಾಯಿ ಖರ್ಚು ಮಾಡಿಕೊಂಡು ಶಾಲಾ-ಕಾಲೇಜುಗಳಿಗೆ ಹೋಗಬೇಕಾಗಿದೆ ಎಂದರು.
ಅರ್ಜಿ ಸಲ್ಲಿಸಿದ ನಂತರ ವಿದ್ಯಾರ್ಥಿಗಳು ವಾರಗಳ ಕಾಲ ಬಸ್ ಪಾಸ್‌ಗೆ ಕಾಯಬೇಕಾದ ಸ್ಥಿತಿ ಇದೆ. ಶಕ್ತಿ ಯೋಜನೆ ಜಾರಿಯಾದ ನಂತರ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುತ್ತಿದ್ದಾರೆ. ಅಲ್ಲದೆ, ಬಸ್‌ಗಳ ಸಂಖ್ಯೆಯೂ ಕಡಿಮೆಯಾಗಿದೆ. ಹೀಗಾಗಿ ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.
ಸಾರಿಗೆ ಸಚಿವರು ಗಮನ ಹರಿಸಿ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗುತ್ತದೆ ಎಂದರು.
ಕಾಲೇಜುಗಳು, ಪ್ರೌಢಶಾಲೆಗಳು ಪ್ರಾರಂಭವಾಗಿ ಒಂದೂವರೆ ತಿಂಗಳಾದರೂ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳಿಗೆ ಪ್ರವೇಶ ಸಿಗುತ್ತಿಲ್ಲ. ಸರ್ವರ್ ಸಮಸ್ಯೆ ನೆಪವೊಡ್ಡಿ ಪ್ರವೇಶಕ್ಕೆ ಈಗ ಅರ್ಜಿ ಕರೆಯಲಾಗಿದ್ದು, ಪ್ರವೇಶಕ್ಕಾಗಿ ಮೂರು ತಿಂಗಳು ಕಾಯಬೇಕು. ಅಲ್ಲಿಯವರೆಗೆ ವಿದ್ಯಾರ್ಥಿಗಳು ಎಲ್ಲಿ ಉಳಿದುಕೊಂಡು ಶಿಕ್ಷಣ ಪಡೆಯಬೇಕು ಎಂದು ಪ್ರಶ್ನಿಸಿದರು.
ಕಾರ್ಮಿಕರ ಮಕ್ಕಳು ಸೇರಿದಂತೆ ಬಡ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ವಿದ್ಯಾರ್ಥಿವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ವೇಳಾಪಟ್ಟಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಇದನ್ನು ಸಮರ್ಪಕವಾಗಿ ಜಾರಿಗೆ ತರಬೇಕು. ಇದರಿಂದಾಗಿ ವಿದ್ಯಾರ್ಥಿವೇತನ, ಹಾಸ್ಟೆಲ್‌ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು, ಬಸ್ ಪಾಸ್ ಪಡೆಯಲು ಅನುಕೂಲವಾಗುತ್ತದೆ ಎಂದರು.
ನೀಟ್–ಯುಜಿ ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ ಲಕ್ಷಾಂತರ ವಿದ್ಯರ್ಥಿಗಳಿಗೆ ಅನ್ಯಾಯವಾಗಿದೆ. ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಇದನ್ನು ಖಂಡಿಸಿ ಶೀಘ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಅರುಣ್ ಅಮರಗೋಳ, ಅಮೃತಾ ಕೊಳ್ಳಿ, ಸಿದ್ಧಾರ್ಥ ಕೋರಿ ಪತ್ರಿಕಾಗೋಷ್ಠಿಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.