ಹುಬ್ಬಳ್ಳಿ: ‘ಹುಬ್ಬಳ್ಳಿ–ಧಾರವಾಡ ಮಹಾನಗರಕ್ಕೆ ನಿರಂತರ ನೀರು ಪೂರೈಕೆ ಮತ್ತು ನಿರ್ವಹಣೆಯ ಹೊಣೆ ಹೊತ್ತಿರುವ ಎಲ್ ಆ್ಯಂಡ್ ಟಿ ಕಂಪನಿಯ ಕಾರ್ಯವೈಖರಿ ತೃಪ್ತಿಕರವಾಗಿರದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.
ನಗರದ ಡೆನಿಸನ್ಸ್ ಹೋಟೆಲ್‌ನಲ್ಲಿ ಭಾನುವಾರ ಯೋಜನೆಯ ಪ್ರಗತಿ ಪರಿಶೀಲನೆ ಕುರಿತು ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಯೋಜನೆಯ ಕಾಮಗಾರಿಯನ್ನು ಚುರುಕುಗೊಳ್ಳಬೇಕು. ಅದಕ್ಕಾಗಿ, ಕಂಪನಿಯು ಸ್ಥಳೀಯ ಜನಪ್ರತಿನಿಧಿಗಳ ಸಲಹೆ ಪಡೆಯಬೇಕು’ ಎಂದರು.
‘ನಿರ್ವಹಣೆಯ ಸಂಪೂರ್ಣ ಜವಾಬ್ದಾರಿಯನ್ನು ತಕ್ಷಣ ತೆಗೆದುಕೊಳ್ಳಬೇಕು. ಪ್ರತಿ ತಿಂಗಳು ಜಿಲ್ಲಾಧಿಕಾರಿ ಮೂಲಕ ಯೋಜನೆಯ ಪ್ರಗತಿ ಮಾಹಿತಿ ನೀಡಬೇಕು. ತನ್ನ ಸಮಸ್ಯೆಗಳನ್ನು ನಿವಾರಿಸಿಕೊಂಡು ಮುನ್ನಡೆಯಬೇಕು. ಅದಕ್ಕೆ ಜಿಲ್ಲಾಡಳಿತ ಮತ್ತು ಸರ್ಕಾರ ಸಹಕರಿಸಲಿವೆ’ ಎಂದು ತಿಳಿಸಿದರು.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ, ‘ಯೋಜನೆ ಅನುಷ್ಠಾನದಲ್ಲಿ ಉದಾಸೀನ ಮನೋಭಾವ ತಾಳಬಾರದು. ಕೆಲವೆಡೆ ಇಂದಿಗೂ 6–8 ದಿನಗಳಿಗೊಮ್ಮೆ ನೀರು ಪೂರೈಕೆಯಾಗುತ್ತಿರುವ ಬಗ್ಗೆ ಜನರಿಂದ ದೂರುಗಳು ಬರುತ್ತಿವೆ. ಕೆಯುಡಿಎಫ್‌ಸಿ ಹಾಗೂ ಎಲ್ ಆ್ಯಂಡ್ ಟಿ ಸಮನ್ವಯದೊಂದಿಗೆ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು’ ಎಂದು ಸೂಚಿಸಿದರು.
ಮೇಯರ್ ಮನವಿ: ‘ಅವಳಿನಗರದಲ್ಲಿ ಸದ್ಯ ₹155 ಕೋಟಿ ನೀರಿನ ಬಿಲ್ ಬಾಕಿ ಇದೆ. ಇದರಲ್ಲಿ ಅಸಲಿಗಿಂತ ಬಡ್ಡಿಯೇ ಹೆಚ್ಚಾಗಿದೆ. ಬಡ್ಡಿ ಮನ್ನಾ ಮಾಡಿ ಕೇವಲ ಅಸಲು ಮೊತ್ತವನ್ನು ನಿಗದಿತ ಅವಧಿಯೊಳಗೆ ಪಾವತಿ ಮಾಡಲು ಅವಕಾಶ ನೀಡಬೇಕು. ಮುಂದೆ, ಬಿಲ್ ಬಾಕಿ ಉಳಿಯದಂತೆ ನೋಡಿಕೊಳ್ಳಬಹುದು’ ಎಂದು ಮೇಯರ್ ಈರೇಶ ಅಂಚಟಗೇರಿ ಅವರು ಸಿ.ಎಂ.ಗೆ ಮನವಿ ಮಾಡಿದರು.
ಸಚಿವರಾದ ಹಾಲಪ್ಪ ಆಚಾರ, ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರಾದ ಜಗದೀಶ ಶೆಟ್ಟರ್, ಅರವಿಂದ ಬೆಲ್ಲದ, ಅಮೃತ ದೇಸಾಯಿ, ಪ್ರಸಾದ ಅಬ್ಬಯ್ಯ, ಸಿ.ಎಂ. ನಿಂಬಣ್ಣವರ, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ್, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕಾರ್ಯದರ್ಶಿ ಅಜಯ್ ನಾಗಭೂಷಣ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಆರ್. ವಿಶಾಲ್, ಕೆಯುಐಡಿಎಫ್‌ಸಿ ವ್ಯವಸ್ಥಾಪಕ ನಿರ್ದೇಶಕಿ ದೀಪಾ ಚೋಳನ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪಾಲಿಕೆ ಆಯುಕ್ತ ಡಾ. ಗೋಪಾಲಕೃಷ್ಣ ಬಿ. ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.