ADVERTISEMENT

ಬರ ಚರ್ಚೆ; ಭೇಟಿಗೆ ಅವಕಾಶ ನೀಡದ ಪ್ರಧಾನಿ- ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2023, 7:05 IST
Last Updated 17 ಡಿಸೆಂಬರ್ 2023, 7:05 IST
ಸಿದ್ದರಾಮಯ್ಯ
ಸಿದ್ದರಾಮಯ್ಯ    

(ಸಂಗ್ರಹ ಚಿತ್ರ)

ಹುಬ್ಬಳ್ಳಿ: ‘ಬರದ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಅವರ ಭೇಟಿಗೆ ಅವಕಾಶ ನೀಡುವಂತೆ ನ.27ರಂದು ಪತ್ರ ಬರೆಯಲಾಗಿದೆ. ಈವರೆಗೂ ಅವಕಾಶ ನೀಡಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ₹35 ಸಾವಿರ ಕೋಟಿ ಮೊತ್ತದ ಬೆಳೆ ನಷ್ಟ ಆಗಿದೆ. ರಾಷ್ಟ್ರೀಯ ವಿಕೋಪ ಪರಿಹಾರ ನಿಧಿಯಡಿ (ಎನ್‌ಡಿಆರ್‌ಎಫ್‌) ರಾಜ್ಯಕ್ಕೆ ₹18 ಸಾವಿರ ಕೋಟಿ ಬರಬೇಕು. ಇದು ಕೇಂದ್ರದ ಹಣವಲ್ಲ. ರಾಜ್ಯದ ಜನರ ತೆರಿಗೆ ಹಣ. ನಾವು ₹4 ಲಕ್ಷ ಕೋಟಿ ತೆರಿಗೆ ಕಟ್ಟುತ್ತೇವೆ. ಕೇಂದ್ರದಿಂದ ನಮಗೆ ವಾಪಸ್ ಬರುವುದು ₹50 ಸಾವಿರ ಕೋಟಿ ಮಾತ್ರ. ಇದು ನ್ಯಾಯವೇ?’ ಎಂದು ಪ್ರಶ್ನಿಸಿದರು.

ADVERTISEMENT

‘‌ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧಿಸಿದಂತೆ ಪ್ರತಿ ಜಿಲ್ಲೆಗೆ ಒಬ್ಬೊಬ್ಬ ಸಚಿವರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಅವರು ನೀಡುವ ವರದಿ ಮತ್ತು ಶಾಸಕರು, ಹಿಂದೆ ಅಭ್ಯರ್ಥಿಗಳಾಗಿದ್ದವರು, ಕಾರ್ಯಕರ್ತರ ಅಭಿಪ್ರಾಯ ಪಡೆದು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು’ ಎಂದರು.

‘ಅಲ್ಪಸಂಖ್ಯಾತರಿಗೆ ಮೂರು ಕ್ಷೇತ್ರಗಳಲ್ಲಿ ಟಿಕೆಟ್ ನೀಡಬೇಕು’ ಎಂಬ ಸಚಿವ ಜಮೀರ್ ಅಹ್ಮದ್ ಖಾನ್‌ ಅವರ ಒತ್ತಾಯಕ್ಕೆ ಪ್ರತಿಕ್ರಿಯಿಸಿ, ‘ಹಿಂದೆಯೂ ಎರಡು ಕ್ಷೇತ್ರಗಳಲ್ಲಿ ಟಿಕೆಟ್ ನೀಡಲಾಗಿತ್ತು. ಈ ಬಾರಿಯೂ ನೀಡುತ್ತೇವೆ. ಆದರೆ, ಬಿಜೆಪಿಯವರು ಅಲ್ಪಸಂಖ್ಯಾತರ ಮತಗಳೇ ಬೇಡ ಎನ್ನುತ್ತಾರೆ. ಅವರು ದೇಶದ ನಾಗರಿಕರಲ್ಲವೇ?‘ ಎಂದು ಪ್ರಶ್ನಿಸಿದರು.

ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಜಗದೀಶ ಶೆಟ್ಟರ್‌ ಅವರ ಅಭಿಪ್ರಾಯ ಕೇಳಲಾಗಿದ್ದು, ಅವರೂ ಆಕಾಂಕ್ಷಿ ಇರಬಹುದು ಎಂದು ಸಿ.ಎಂ ಹೇಳಿದರು. ಈ ಸಂದರ್ಭದಲ್ಲಿ ಪಕ್ಕದಲ್ಲಿದ್ದ ಶೆಟ್ಟರ್, ‘ನಾನು ಆಕಾಂಕ್ಷಿ ಅಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ’ ಎಂದು ಸ್ಪಷ್ಟಪಡಿಸಿದರು.

‘ಮೌಲ್ವಿ ತನ್ವೀರ್ ಹಾಸ್ಮಿ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಕೆಲಸ ಮಾಡಿದ್ದರು. ಹೀಗಾಗಿ ಅವರ ವಿರುದ್ಧ ಆರೋಪ ಮಾಡುತ್ತಿದ್ದಾರೆ’ ಎಂದರು.

‘ಶೀಘ್ರ ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗುವುದು. ಮೊದಲ ಹಂತದಲ್ಲಿ ಶಾಸಕರು, ಎರಡನೇ ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು’ ಎಂದು ತಿಳಿಸಿದರು.

‘ಬೆಳಗಾವಿ ತಾಲ್ಲೂಕಿನ ಹೊಸ ವಂಟಮೂರಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ, ಹಲ್ಲೆ ಮಾಡಿದ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸಲಾಗಿದೆ. ಅವರಿಗೆ ಶಿಕ್ಷೆ ಕೊಡಿಸಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು’ ಎಂದು ಹೇಳಿದರು.

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಯಲುವಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಪ್ರಕರಣ ಸಂಬಂಧ ವರದಿ ತರಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಸಚಿವರಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.