ADVERTISEMENT

ರಾಮಮಂದಿರ ಯಶಸ್ಸಿನ ಪಾಲು ಪಡೆಯಲು ಕಾಂಗ್ರೆಸ್‌ ಯತ್ನ: ಪ್ರಲ್ಹಾದ ಜೋಶಿ

​ಪ್ರಜಾವಾಣಿ ವಾರ್ತೆ
Published 9 ಜನವರಿ 2024, 12:42 IST
Last Updated 9 ಜನವರಿ 2024, 12:42 IST
   

ಹುಬ್ಬಳ್ಳಿ: ‘ರಾಮನ ಅಸ್ತಿತ್ವದ ಬಗ್ಗೆ ಪ್ರಶ್ನೆ ಮಾಡಿದ್ದ ಕಾಂಗ್ರೆಸ್ಸಿಗರು ಈಗ ರಾಮಮಂದಿರದ ಯಶಸ್ಸಿನ ಪಾಲು ಪಡೆಯಲು ಪ್ರಯತ್ನಿಸುತ್ತಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು.

ರಾಮ ಮಂದಿರ ಉದ್ಘಾಟನೆ ಅಂಗವಾಗಿ ಜನರಿಗೆ ನೀಡುತ್ತಿರುವ ಮಂತ್ರಾಕ್ಷತೆಗೆ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿ ಬಳಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡರು ನೀಡಿದ ಹೇಳಿಕೆಗೆ ನಗರದಲ್ಲಿ ಮಂಗಳವಾರ ಸುದ್ದಿಗಾರರಿಗೆ ಅವರು ಪ್ರತಿಕ್ರಿಯಿಸಿದರು.

‘ರಾಮ ಕಾಲ್ಪನಿಕ. ರಾಮಾಯಣ ನಡೆದಿದೆ ಎನ್ನುವುದಕ್ಕೆ ಪುರಾವೆಗಳಿಲ್ಲ. ಶ್ರೀರಾಮ ಜನ್ಮ ಭೂಮಿ ಕುರಿತು ನಿರ್ಣಯ ಕೈಗೊಳ್ಳಬಾರದೆಂದು ಕಾಂಗ್ರೆಸ್ಸಿಗರು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಈಗ ಎಲ್ಲವೂ ಬಗೆಹರಿದು, ರಾಮಮಂದಿರ ನಿರ್ಮಾಣವಾಗಿದೆ. ಇದರ ಕ್ರೆಡಿಟ್‌ ಪಡೆಯಲು ಕಾಂಗ್ರೆಸ್ಸಿಗರು ಹೊರಟಿದ್ದಾರೆ. ಜನರ ದಾರಿ ತಪ್ಪಿಸಲು ಹೊರಟಿದ್ದಾರೆ. ಜನರು ಬುದ್ಧಿವಂತರಿದ್ದು, ಎಲ್ಲವೂ ಗೊತ್ತಾಗುತ್ತದೆ’ ಎಂದು ಹೇಳಿದರು.

ADVERTISEMENT

‘ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ ಅಕ್ಕಿ ಸಂಪೂರ್ಣವಾಗಿ ಕೇಂದ್ರ ಸರ್ಕಾರದ್ದು. ರಾಜ್ಯದ ಕಾಂಗ್ರೆಸ್‌ ಸರ್ಕಾರ ಇದುವರೆಗೆ ಒಂದು ಕಾಳು ಅಕ್ಕಿ ಕೊಟ್ಟಿಲ್ಲ. ಚುನಾವಣೆ ವೇಳೆ 10 ಕೆ.ಜಿ. ಅಕ್ಕಿ ಕೊಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದರು. ಆದರೆ, ಇದುವರೆಗೆ ಕೊಟ್ಟಿಲ್ಲ’ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.