ಹುಬ್ಬಳ್ಳಿ: ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವಂತೆ ಬೇಡಿಕೆ ಹೆಚ್ಚಾಗುತ್ತಿದ್ದು, ಸೆ. 5ರಂದು ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸ್ವ ಕ್ಷೇತ್ರ ಶಿಗ್ಗಾವಿಗೆ ತೆರಳುವ ಮುನ್ನ ಬುಧವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ‘ಕೋವಿಡ್ ಪರಿಸ್ಥಿತಿಯಲ್ಲಿ ಹಿಂದಿನ ವರ್ಷ ಯಾವ ರೀತಿ ಗಣೇಶೋತ್ಸವ ಆಚರಣೆ ಮಾಡಲಾಗಿತ್ತು. ಈ ವರ್ಷ ಪರಿಸ್ಥಿತಿ ಹೇಗಿದೆ ಎನ್ನುವುದರ ಬಗ್ಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಅವರು ನೀಡುವ ವರದಿಯನ್ನು ತಜ್ಞರ ತಂಡ ಪರಿಶೀಲನೆ ನಡೆಸಿದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಹುಬ್ಬಳ್ಳಿಗೆ ಬರಲಿದ್ದು, ಅಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಗಳು ಹಾಗೂ ಭವಿಷ್ಯದ ಯೋಜನೆಗಳ ಬಗ್ಗೆ ಚರ್ಚೆಯಾಗಲಿವೆ ಎಂದರು.
ಬಿಜೆಪಿಗೆ ಗೆಲುವಿನ ವಿಶ್ವಾಸ: ಹುಬ್ಬಳ್ಳಿ–ಧಾರವಾಡ, ಬೆಳಗಾವಿ ಹಾಗೂ ಕಲಬುರ್ಗಿ ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯಲಿದೆ ಎಂದು ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ಮಹಾನಗರ ಪಾಲಿಕೆ ವ್ಯಾಪ್ತಿಯುಲ್ಲಿ ಸ್ಮಾರ್ಟ್ ಸಿಟಿ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಅನುದಾನದಿಂದ ಅಭಿವೃದ್ಧಿ ಕೆಲಸಗಳು ಆಗುತ್ತಿವೆ. ಮುಂದಿನ ದಿನಗಳಲ್ಲಿ ಆ ಕೆಲಸಗಳನ್ನು ಇನ್ನಷ್ಟು ದೊಡ್ಡ ಪ್ರಮಾಣ ಮಾಡಲಾಗುವುದು. ಮತದಾರರು ಹಿಂದೆ ನೀಡಿದ್ದ ಬೆಂಬಲವನ್ನು ಮುಂದೆಯೂ ನೀಡಬೇಕು. ಎಲ್ಲ ಮಹಾನಗರ ಪಾಲಿಕೆಗಳಲ್ಲಿ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲಾಗುವುದು. ಬಡವರ ಮತ್ತು ಕೊಳೆಗೇರಿ ನಿವಾಸಿಗಳಿಗೆ ಇನ್ನಷ್ಟು ಮೂಲ ಸೌಕರ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.