ಹುಬ್ಬಳ್ಳಿ: ‘ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸುವಂತೆ ಆಗ್ರಹಿಸಿ ನವೆಂಬರ್ 23ರಿಂದ ಧಾರವಾಡದಲ್ಲಿರುವ ಉನ್ನತ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಲಾಗುತ್ತದೆ’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಹನುಮಂತಗೌಡ ಆರ್. ಕಲ್ಮನಿ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದಿನಿಂದ ರಾಜ್ಯದ ವಿವಿಧೆಡೆ ಇರುವ ಉನ್ನತ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಎದುರು ಆಯಾ ವ್ಯಾಪ್ತಿಯ ಜಿಲ್ಲೆಗಳ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ, ಹಂತ ಹಂತವಾಗಿ ಧರಣಿ ನಡೆಸಲಿದ್ದಾರೆ. ಚಳಿಗಾಲದ ಅಧಿವೇಶನದ ಸಂದರ್ಭದಲ್ಲೂ ಪ್ರತಿಭಟನೆ ನಡೆಯಲಿವೆ’ ಎಂದು ತಿಳಿಸಿದರು.
‘ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ 11,778 ಅತಿಥಿ ಉಪನ್ಯಾಸಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸಿ, ಕೆಲಸ ಕಾಯಂಗೊಳಿಸುವಂತೆ ಹಲವು ವರ್ಷಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಹಿಂದೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಚುನಾವಣಾ ಪ್ರಣಾಳಿಕೆಯಲ್ಲೂ ಈ ಅಂಶ ಘೋಷಿಸಿದ್ದರು. ಅವರೀಗ ನುಡಿದಂತೆ ನಡೆಯಬೇಕು’ ಎಂದು ಆಗ್ರಹಿಸಿದರು.
‘ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಈ ಬಗ್ಗೆ ಸದನದಲ್ಲಿ ಧ್ವನಿ ಎತ್ತಬೇಕು. ನಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.
ಸಂಘದ ರಾಜ್ಯ ಪ್ರಧಾನಿ ಕಾರ್ಯದರ್ಶಿ ವಿನೋದ ಚಂದ ಪೀಟರ್, ಶಶಿಕಲಾ ಜೋಳದ, ದಿವ್ಯಾ ಪರಾಂಡೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.