ಹುಬ್ಬಳ್ಳಿ: ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಕಳವು ಪ್ರಕರಣದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನಗರದ ಹೊರವಲಯದ ತಾರಿಹಾಳ ಕ್ರಾಸ್ ಬಳಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಮುಂಬೈ ಮೂಲದ ಫರ್ಹಾನ್ ಶೇಖ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಗಾಯಗೊಂಡಿರುವ ಪಿಎಸ್‌ಐ ಕವಿತಾ ಮಾಡಗ್ಯಾಳ, ಕಾನ್‌ಸ್ಟೆಬಲ್ ಮಹೇಶ ಹಾಗೂ ಕವಿತಾ ಅವರನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ.
ನಗರದ ರಮೇಶ ಭವನದ ಬಳಿಯಿರುವ ಭುವನೇಶ್ವರಿ ಜ್ಯುವೆಲ್ಲರಿ ಶಾಪ್‌ನಲ್ಲಿನ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿ ಗುರುವಾರ ರಾತ್ರಿ ಕೇಶ್ವಾಪುರ ಠಾಣೆ ಪೊಲೀಸರು ಆರೋಪಿ ಫರ್ಹಾನ್ ಶೇಖ್‌ನನ್ನು ವಶಕ್ಕೆ ಪಡೆದಿದ್ದರು. ಇನ್ನುಳಿದ ಆರೋಪಿಗಳನ್ನು ವಶಕ್ಕೆ ಪಡೆಯಲು ಇಂದು ಬೆಳಿಗ್ಗೆ ಗಾಮನಗಟ್ಟಿ ಕಡೆಗೆ ತೆರಳುತ್ತಿದ್ದಾಗ, ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಆ ವೇಳೆ ಗೋಕುಲ ಠಾಣೆಯ ಪಿಎಸ್‌ಐ ಕವಿತಾ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿ, ನಂತರ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಆರೋಪಿಯನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ.
'ಕರ್ನಾಟಕ ಸೇರಿ ಮಹಾರಾಷ್ಟ್ರ, ತೆಲಂಗಾಣ, ಗುಜರಾತನ ವಿವಿಧ ಪೊಲೀಸ್ ಠಾಣೆಗಳಲ್ಲಿ ಆರೋಪಿ ಫರ್ಹಾನ್ ವಿರುದ್ಧ ಒಟ್ಟು 15 ಪ್ರಕರಣಗಳು ದಾಖಲಾಗಿವೆ. ಈತನ ತಂಡ ಮುಂಬೈ, ಸೂರತ್, ಅಹ್ಮದನಗರ, ಹೈದರಾಬಾದ್‌ನಲ್ಲಿ ಕಳವು, ದರೋಡೆ ಮಾಡುತ್ತಿತ್ತು. ಕೊಲೆ ಯತ್ನದಂಥ ಪ್ರಕರಣಗಳು ಇವರ ಮೇಲಿದೆ' ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.