ಹುಬ್ಬಳ್ಳಿ: ಮಾದಿಗ ದಂಡೋರ ಸಂಘಟನೆ ವತಿಯಿಂದ ಡಿ.30ರಂದು ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಂಗಣದಲ್ಲಿ ಮಾದಿಗ ಮುನ್ನಡೆ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಉತ್ತರ ಕರ್ನಾಟಕ ವಿಭಾಗದ ಅಧ್ಯಕ್ಷ ಮಂಜುನಾಥ ಕೊಂಡಪಲ್ಲಿ ಹೇಳಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕ ದುರ್ಯೋಧನ ಐಹೊಳೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಶಾಸಕರಾದ ಬಸವರಾಜ ಬೊಮ್ಮಾಯಿ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ, ಮಾದಿಗ ಡಂಡೋರ ರಾಜ್ಯ ಘಟಕದ ಅಧ್ಯಕ್ಷ ಬಿ.ನರಸಪ್ಪ ದಂಡೋರ, ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮಿನಾರಾಯಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
30 ವರ್ಷಗಳಿಂದ ಒಳಮೀಸಲಾತಿಗಾಗಿ ಹೋರಾಟ ನಡೆಸಲಾಗುತ್ತಿದೆ. ಕಳೆದ ಸರ್ಕಾರ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ 15ರಿಂದ ಶೇ 17ಕ್ಕೆ ಹೆಚ್ಚಿಸಿ ಅಧಿಸೂಚನೆ ಹೊರಡಿಸಿತ್ತು. ಅಲ್ಲದೆ, ಅಂದಿನ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ನೇತೃತ್ವದ ಸಂಪುಟ ಉಪಸಮಿತಿ ಶಿಫಾರಸಿನಂತೆ ಜನಸಂಖ್ಯೆ ಆಧಾರದ ಮೇಲೆ ಒಳಮೀಸಲಾತಿ ಹಂಚಿಕೆ ಮಾಡಲು ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಿತ್ತು ಎಂದರು.
ಈ ವಿಷಯ ಜ.17ರಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದ್ದು, ವಾದ ಮಂಡಿಸಲು ಸರ್ಕಾರದಿಂದ ಸಾಲಿಸಿಟರ್ ಜನರಲ್, ಡೆಪ್ಯುಟಿ ಸಾಲಿಸಿಟರ್ ಜನರಲ್ ಅವರನ್ನು ನೇಮಿಸಿರುವುದು ಐತಿಹಾಸಿಕ ನಿರ್ಣಯವಾಗಿದೆ ಎಂದು ಹೇಳಿದರು.
ಹೋರಾಟ ಸಾಗಿ ಬಂದ ದಾರಿ, ಮೀಸಲಾತಿ ಕುರಿತು ಸಮಾಜದವರಲ್ಲಿ ಜಾಗೃತಿ ಮೂಡಿಸಲು ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ 2 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಸಹದೇವ ಮಳಗಿ, ಹಂಸವೇಣಿ, ಗೋಪಾಲ ದೊಡ್ಡಮನಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.