ಹುಬ್ಬಳ್ಳಿ: ಶಿಗ್ಗಾವಿ ಉಪಚುನಾವಣೆಯಲ್ಲಿ ಸ್ಪರ್ಧಿಸಿರುವ ತಮ್ಮ ಮಗನನ್ನು ಗೆಲ್ಲಿಸಿಕೊಳ್ಳಲು ಸಂಸದ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ ರೌಡಿಶೀಟರ್ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಚಿವ ಶಿವಾನಂದ ಪಾಟೀಲ ಆರೋಪಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪಠಾಣ ರೌಡಿ ಶೀಟರ್ ಅಲ್ಲ ಎಂದು ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಎಸ್‌ಪಿ ಅವರ ಮೇಲೆ ಸರ್ಕಾರ ಒತ್ತಡ ಹೇರಿ, ಈ ಹೇಳಿಕೆ ಕೊಡಿಸಿದೆ ಎಂದು ಬೊಮ್ಮಾಯಿ ಮಾಡಿರುವ ಆರೋಪ ಸತ್ಯಕ್ಕೆ ದೂರವಾದುದು. ತಮ್ಮ ಮಗನನ್ನು ಗೆಲ್ಲಿಸಿಕೊಳ್ಳಲು ಸ್ವಾರ್ಥ ಸಾಧನೆಗಾಗಿ ಇಂತಹ ಆರೋಪ ಮಾಡುತ್ತಿರುವುದು ದುರದೃಷ್ಟಕರ. ಅವರ ಮೇಲೆ ನಾನಾಗಲೀ, ಮುಖ್ಯಮಂತ್ರಿ ಅವರಾಗಲೀ ಪ್ರಭಾವ ಬೀರಿಲ್ಲ. ನಾನು ಪ್ರಭಾವ ಬೀರಿದ್ದನ್ನು ಸಾಬೀತು ಪಡಿಸಿದರೆ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳುವೆ’ ಎಂದು ಸವಾಲೆಸೆದರು.
‘ಬೊಮ್ಮಾಯಿ ಅವರು ಪ್ರತಿ ಚುನಾವಣೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಇಂತಹ ಗಂಭೀರ ಆರೋಪ ಮಾಡುತ್ತಾರೆ. ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಖಾದ್ರಿ ಅವರು ಭಯೋತ್ಪಾದಕರ ಜೊತೆ ನಂಟು ಹೊಂದಿದ್ದಾರೆ ಎಂದು ಆರೋಪಿಸಿದ್ದರು. ಕೊನೆ ಕ್ಷಣದಲ್ಲಿ ಇಂತಹ ಆಪಾದನೆ ಮಾಡಿದರೆ ಮತದಾರರು ವಿಚಲಿತರಾಗಬಹುದು ಎನ್ನುವ ಆತಂಕ ಕಾಡುತ್ತಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.