ಧಾರವಾಡ: ‘ಆರ್.ವಿ.ದೇಶಪಾಂಡೆ ಅವರು ಹಿರಿಯರು. ತನಗೂ ಮುಖ್ಯಮಂತ್ರಿಯಾಗುವ ಆಸೆ ಇದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿರುವುದರಲ್ಲಿ ತಪ್ಪೇನೂ ಇಲ್ಲ, ಆದರೆ ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ’ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ಮುಖ್ಯಮಂತ್ರಿಯಾಗಬೇಕು ಎಂದು ಎಲ್ಲರಿಗೂ ಆಸೆ ಇರುತ್ತದೆ. ನನಗೂ ಇದೆ’ ಎಂದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಟಗರು ಇದ್ದಂತೆ. ಅವರಿಗೂ ಮುಡಾ ಪ್ರಕರಣಕ್ಕೂ ಸಂಬಂಧ ಇಲ್ಲ. ಪ್ರಕರಣದಲ್ಲಿ ಅವರ ವಿರುದ್ಧ ಕ್ರಮ ಆಗಲ್ಲ. ಐದು ವರ್ಷ ಅವರೇ ಮುಖ್ಯಮಂತ್ರಿ’ ಎಂದು ಪ್ರತಿಪಾದಿಸಿದರು.
‘ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಹಳಷ್ಟು ಹಗರಣಗಳಾಗಿವೆ, ಎಲ್ಲವನ್ನು ಬಯಲಿಗೆಳೆಯುತ್ತೇವೆ. ಸಿದ್ದರಾಮಯ್ಯ ಅವರನ್ನು ಗೊಂದಲಕ್ಕೀಡು ಮಾಡಿದರೆ ಕಾಂಗ್ರೆಸ್ ಪಕ್ಷವನ್ನು ಗೊಂದಲಕ್ಕೀಡು ಮಾಡಿದಂತೆ. ಹಿಂದುಳಿದ ಸಮಾಜದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿರುವುದನ್ನು ಬಿಜೆಪಿಯವರಿಗೆ ಸಹಿಸಲಾಗುತ್ತಿಲ್ಲ’ ಎಂದು ಕುಟುಕಿದರು.
ವಕ್ಫ್ ಆಸ್ತಿ ಪರಿಶೀಲನಾ ಸಭೆಯನ್ನು ಹಲವು ಜಿಲ್ಲೆಗಳಲ್ಲಿ ಸಭೆ ನಡೆಸಲಾಗಿದೆ. ಕೆಲವೆಡೆ ವಕ್ಫ್ ಆಸ್ತಿ ಅತ್ರಿಕ್ರಮಣವಾಗಿದ್ದವು. ಒತ್ತುವರಿ ತೆರವಿಗೆ ಕ್ರಮ ವಹಿಸಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.