ಧಾರವಾಡ: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟವನ್ನು ಮುಂದುವರಿಸುವ ನಿಟ್ಟಿನಲ್ಲಿ ಹೋರಾಟದ ರೂಪುರೇಷೆಗಳ ಕುರಿತು ಚರ್ಚಿಸಲು ಮೇ 23ರಂದು ಉತ್ತರ ಕನ್ನಡ ಜಿಲ್ಲೆಯ ಉಳವಿಯಲ್ಲಿ ಸಂಕಲ್ಪ ಸಭೆ ಆಯೋಜಿಸಲಾಗಿದೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.
ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಉಳವಿಯ ಚನ್ನಬಸವೇಶ್ವರ ಸಭಾ ಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ಏರ್ಪಡಿಸಲಾಗಿದೆ. 24ರಂದು ಬೆಳಿಗ್ಗೆ 8 ಗಂಟೆಗೆ ಇಷ್ಟಲಿಂಗ ಪೂಜೆ ನೆರವೇರಿಸಲಾಗುವುದು ಎಂದು ತಿಳಿಸಿದರು.
ಮೀಸಲಾತಿಗಾಗಿ ಆಗ್ರಹಿಸಿ ಮೂರು ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸಿದ್ದೇವೆ. ಈವರೆಗೆ 12 ಜಿಲ್ಲೆಗಳಲ್ಲಿ ಹೋರಾಟ ನಡೆಸಿದ್ದೇವೆ. ಚುನಾವಣೆ ನೀತಿ ಸಂಹಿತೆ ಕಾರಣಕ್ಕೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇನ್ನು 18 ಜಿಲ್ಲೆಗಳಲ್ಲಿ ಹೋರಾಟ ಮುಂದುವರಿಸುವ ನಿಟ್ಟಿನಲ್ಲಿ ಸಂಕಲ್ಪ ಸಭೆಯಲ್ಲಿ ರೂಪುರೇಷೆಗಳನ್ನು ನಿರ್ಧರಿಸಲಾಗುವುದು ಎಂದರು.
ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಜೂನ್ ಕೊನೆ ವಾರದಲ್ಲಿ ಪಂಚಮಸಾಲಿ ಸಮುದಾಯದ ಜನಪ್ರತಿನಿಧಿಗಳ ಜತೆ ಸಭೆ ನಡೆಸಲಾಗುವುದು. ಮೀಸಲಾತಿ ವಿಚಾರ ಕುರಿತು ಮಳೆಗಾಲದ ಅಧಿವೇಶನದಲ್ಲಿ ಧ್ವನಿ ಎತ್ತುವಂತೆ ಕೋರಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.