ಹುಬ್ಬಳ್ಳಿ: ‘ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲು ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಡಿ.10ರಂದು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಟ್ರಾಕ್ಟರ್‌ಗಳ ಮೂಲಕ ಮುತ್ತಿಗೆ ಹಾಕಲಾಗುವುದು’ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಮಹಾಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ವಕೀಲರ ಪರಿಷತ್‌ನ ಧಾರವಾಡ ಜಿಲ್ಲಾ ಮತ್ತು ಹುಬ್ಬಳ್ಳಿ ತಾಲ್ಲೂಕು ಘಟಕದ ಆಶ್ರಯದಲ್ಲಿ ನಗರದಲ್ಲಿ ಶನಿವಾರ ನಡೆದ ರಾಜ್ಯಮಟ್ಟದ ಪೂರ್ವಭಾವಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಾಜಕ್ಕೆ 2ಎ ಮೀಸಲಾತಿ ಸಿಗುವವರೆಗೆ ಹೋರಾಟ ನಡೆಸುತ್ತೇವೆ’ ಎಂದರು.
‘ಟ್ರಾಕ್ಟರ್ ಮೂಲಕ ಮುತ್ತಿಗೆ ಹಾಕುವ ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ಸಮಾಜದವರು ಅಪಾರ ಸಂಖ್ಯೆಯಲ್ಲಿ ಬಂದು, ಮುತ್ತಿಗೆ ಹಾಕಬೇಕು. ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು’ ಎಂದರು.
‘ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸದನದ ಒಳಗೆ ಅಹೋರಾತ್ರಿ ಧರಣಿ ನಡೆಸುವುದಾಗಿ ಹೇಳಿದ್ದಾರೆ. ಅವರಿಗೆ ಸಮಾಜದ ಎಲ್ಲ ಶಾಸಕರು ಪಕ್ಷಾತೀತವಾಗಿ ಬೆಂಬಲಿಸಬೇಕು. ಅವರೊಂದಿಗೆ ಧ್ವನಿಗೂಡಿಸಬೇಕು. ನಾವು, ಸಮಾಜದವರ ಜೊತೆ ಸೇರಿ ಸದನದ ಹೊರಗೆ ಹೋರಾಟ ನಡೆಸುತ್ತೇವೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.