ADVERTISEMENT

ಗದಗ | ಪ್ರವಾಹ ಪರಿಸ್ಥಿತಿ ನಿರ್ಹವಣೆಗೆ ಸನ್ನದ್ಧರಾಗಿ: ಡಿಸಿ

ಬೆಣ್ಣೆಹಳ್ಳ, ಮಲಪ್ರಭಾ ನದಿಯ ಹರಿವಿನ ಗ್ರಾಮಗಳಲ್ಲಿ ಕಟ್ಟೆಚ್ಚರಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2024, 14:06 IST
Last Updated 25 ಜುಲೈ 2024, 14:06 IST
ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದಂತೆ ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರು ರೋಣ ಹಾಗೂ ನರಗುಂದ ತಾಲ್ಲೂಕು ಆಡಳಿತಕ್ಕೆ ಸೂಚನೆಗಳನ್ನು ನೀಡಿದರು
ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದಂತೆ ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರು ರೋಣ ಹಾಗೂ ನರಗುಂದ ತಾಲ್ಲೂಕು ಆಡಳಿತಕ್ಕೆ ಸೂಚನೆಗಳನ್ನು ನೀಡಿದರು   

ಗದಗ: ‘ಜಿಲ್ಲೆಯಲ್ಲಿ ಬೆಣ್ಣೆಹಳ್ಳ ಹಾಗೂ ಮಲಪ್ರಭಾ ನದಿಯ ಪ್ರವಾಹಕ್ಕೊಳಗಾಗುವ ಗ್ರಾಮಗಳ ಸಾರ್ವಜನಿಕರ ಸುರಕ್ಷತೆಗೆ ಸ್ಥಳೀಯ ಅಧಿಕಾರಿಗಳು ಕ್ರಮವಹಿಸಬೇಕು’ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೂಚಿಸಿದರು.

ಬೆಣ್ಣೆಹಳ್ಳ ಹಾಗೂ ಮಲಪ್ರಭಾ ನದಿಯ ಪ್ರವಾಹದಿಂದ ತೊಂದರೆಗೊಳಗಾಗುವ ಗ್ರಾಮಗಳ ಸುರಕ್ಷತೆ ಕುರಿತಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನರಗುಂದ ಹಾಗೂ ರೋಣ ತಾಲ್ಲೂಕು ಆಡಳಿತದೊಂದಿಗೆ ಗುರುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘2009 ಹಾಗೂ 2019ರಲ್ಲಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿತ್ತು. ಆ ಸಂದರ್ಭದಲ್ಲಿ ಕಾರ್ಯನಿರ್ವಹಿಸಿದ ಅನೇಕ ಅಧಿಕಾರಿಗಳಿಗೆ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿದ ಅನುಭವ ಇದೆ. ಹಿಂದಿನಂತೆ ಮುಂದೆ ಕೂಡ ಪ್ರವಾಹ ಪರಿಸ್ಥಿತಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಲು ಎಲ್ಲ ಅಧಿಕಾರಿಗಳು ಸನ್ನದ್ಧರಾಗಬೇಕು’ ಎಂದು ಸೂಚಿಸಿದರು.

ADVERTISEMENT

‘ನವಿಲುತೀರ್ಥ ಡ್ಯಾಂ 37.731 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದು ಪ್ರಸ್ತುತ 24 ಟಿಎಂಸಿ ನೀರು ಸಂಗ್ರಹವಾಗಿದೆ. ಪ್ರಸ್ತುತ ನೀರಿನ ಒಳಹರಿವು 26 ಸಾವಿರ ಕ್ಯುಸೆಕ್‌ ಇದ್ದು ಶೀಘ್ರವೇ ನವಿಲುತೀರ್ಥ ಡ್ಯಾಂನಿಂದ ನೀರು ಹೊರಬಿಡುವ ಸಾಧ್ಯತೆಯಿದೆ. ನವಿಲುತೀರ್ಥ ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಟ್ಟಲ್ಲಿ ಮುಂದಿನ 18 ಗಂಟೆಯೊಳಗಾಗಿ ನೀರು ಜಿಲ್ಲೆಗೆ ಪ್ರವೇಶ ಮಾಡಲಿದೆ. ಡ್ಯಾಂನಿಂದ ನೀರು ಹೊರಬಿಡುವ ಮಾಹಿತಿ ದೊರೆತ ತಕ್ಷಣ ತಾಲ್ಲೂಕು ಆಡಳಿತಗಳು ಪ್ರವಾಹ ಪೀಡಿತಕ್ಕೊಳಗಾಗುವ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಿ, ಜೀವಹಾನಿ ತಪ್ಪಿಸಬೇಕು’ ಎಂದು ಸೂಚಿಸಿದರು.

ನವಲಗುಂದ ಸೇರಿದಂತೆ ಐದು ತಾಲ್ಲೂಕುಗಳ ಮಳೆಯಿಂದ ಅಪಾರ ಪ್ರಮಾಣದ ನೀರು ಬೆಣ್ಣೆಹಳ್ಳ ತಲುಪಿ ಅಲ್ಲಿಂದ ಜಿಲ್ಲೆಗೆ ಒಮ್ಮೆಲೇ ನೀರು ಹರಿದು ಬರಲಿದೆ. ಇದರಿಂದ ನರಗುಂದ ಹಾಗೂ ರೋಣ ತಾಲ್ಲೂಕಿನ ಹಲವು ಗ್ರಾಮಗಳು ಪ್ರವಾಹಕ್ಕೊಳಗಾಗುವ ಸಂಭವವಿದ್ದು ಈಗಾಗಲೇ ತಾಲ್ಲೂಕು ಆಡಳಿತ ಅಂತಹ ಗ್ರಾಮಗಳನ್ನು ಗುರುತಿಸಿದೆ. ನೀರಿನ ಪ್ರಮಾಣಕ್ಕನುಗುಣವಾಗಿ ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಬೇಕು ಎಂದು ನಿರ್ದೇಶಿಸಿದರು.

ಪ್ರವಾಹ ಪರಿಸ್ಥಿತಿ ತಲೆದೋರಿದಲ್ಲಿ ಅಗ್ನಿಶಾಮಕದಳ ತಕ್ಷಣ ಕಾರ್ಯಪ್ರವೃತ್ತವಾಗಬೇಕು. ತಾಲ್ಲೂಕು ಆಡಳಿತದೊಂದಿಗೆ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯ ಸಾಧಿಸಿ, ಪ್ರವಾಹ ಪರಿಸ್ಥಿತಿ ನಿರ್ವಹಣೆ ಮಾಡಬೇಕು. ತಗ್ಗುಪ್ರದೇಶಗಳಲ್ಲಿ ಹಾಗೂ ಶಿಥಿಲಾವಸ್ಥೆಯಲ್ಲಿರುವ ಮಣ್ಣಿನ ಮನೆಗಳಲ್ಲಿ ವಾಸಿಸುವವರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಬೇಕು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ., ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಡಿಡಿಎಲ್‌ಆರ್ ರುದ್ರಗೌಡ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್. ನೀಲಗುಂದ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಶಿಕಾಂತ ಕೋಟಿಮನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ, ಅಗ್ನಿಶಾಮಕ ಇಲಾಖೆ ಅಧಿಕಾರಿ ವಿ.ಎಸ್. ಠಕ್ಕೇಕರ್, ವಿಪತ್ತು ನಿರ್ವಹಣಾ ಪರಿಣಿತ ಶಿವಾನಂದ ರಾಜನಾಳ ಇದ್ದರು.

ನರಗುಂದ ಹಾಗೂ ರೋಣ ತಾಲ್ಲೂಕುಗಳ ಪೊಲೀಸ್‌ ಅಧಿಕಾರಿಗಳು ಬೀಟ್ ಮಾಡುವ ಮೂಲಕ ಪ್ರವಾಹ ಪರಿಸ್ಥಿತಿ ಮಾಹಿತಿ ಸಂಗ್ರಹಿಸಬೇಕು. ಪ್ರವಾಹ ಎದುರಾದಲ್ಲಿ ಜನಸಾಮಾನ್ಯರು ನದಿ ಅಂಚಿನ ಕಡೆಗೆ ತೆರಳದಂತೆ ಬ್ಯಾರಿಕೇಡ್ ಹಾಕಿ ಮುಂಜಾಗ್ರತೆ ವಹಿಸಬೇಕು

-ಬಿ.ಎಸ್.ನೇಮಗೌಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸಲು ಎಲ್ಲ ಅಧಿಕಾರಿಗಳು ಸನ್ನದ್ಧರಾಗಬೇಕು. ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದು ಮೂಲಸೌಲಭ್ಯಗಳನ್ನು ಒದಗಿಸಬೇಕು. ಆರೋಗ್ಯಇಲಾಖೆ ಸಿಬ್ಬಂದಿ ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು

-ಭರತ್ ಎಸ್. ಜಿಲ್ಲಾ ಪಂಚಾಯ್ತಿ ಸಿಇಒ

ಪ್ರವಾಹ ಪರಿಸ್ಥತಿ ನಿಭಾಯಿಸಲು ಸನ್ನದ್ಧ

‘ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಈಗಾಗಲೇ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ. ಸ್ಥಳೀಯ ಜೆಸಿಬಿ ಮಾಲೀಕರು ನುರಿತ ಈಜುಗಾರರು ತರಕಾರಿ ಹಾಗೂ ಕಿರಾಣಿ ಅಂಗಡಿ ಮಾಲೀಕರು ಹಾಗೂ ವೈದ್ಯರ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಅಲ್ಲದೇ ಜನಜಾನುವಾರು ಸ್ಥಳಾಂತರಕ್ಕೆ ಸ್ಥಳ ಗುರುತಿಸಿಟ್ಟುಕೊಳ್ಳಲಾಗಿದೆ. ಮೊದಲು ಪ್ರವಾಹಕ್ಕೀಡಾಗುವ ಗ್ರಾಮಗಳ ಪಟ್ಟಿ ಮಾಡಿಟ್ಟುಕೊಂಡಿದ್ದು ಸಂದರ್ಭಕ್ಕೆ ಅನುಗುಣವಾಗಿ ಪ್ರವಾಹ ನಿರ್ವಹಣೆಗೆ ಕ್ರಮ ವಹಿಸಲಾಗುವುದು’ ಎಂದು ತಹಶೀಲ್ದಾರ್‌ರಾದ ಶ್ರೀಶೈಲ ತಳವಾರ ನಾಗರಾಜ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.