ADVERTISEMENT

ನರೇಗಾ ಯೋಜನೆ: ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಳ

ಮಹಿಳಾ ಸಬಲೀಕರಣಕ್ಕೆ ಬಲ ನೀಡಿದ ಉದ್ಯೋಗ ಖಾತ್ರಿ

ನಾಗರಾಜ ಎಸ್‌.ಹಣಗಿ
Published 30 ಜೂನ್ 2024, 6:28 IST
Last Updated 30 ಜೂನ್ 2024, 6:28 IST
ಲಕ್ಷ್ಮೇಶ್ವರ ತಾಲ್ಲೂಕಿನ ಗ್ರಾಮವೊಂದರಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದ ಮಹಿಳಾ ಕಾರ್ಮಿಕರು
ಲಕ್ಷ್ಮೇಶ್ವರ ತಾಲ್ಲೂಕಿನ ಗ್ರಾಮವೊಂದರಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದ ಮಹಿಳಾ ಕಾರ್ಮಿಕರು   

ಲಕ್ಷ್ಮೇಶ್ವರ: ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುವ ಕಾಮಗಾರಿಗಳಲ್ಲಿ ಮಹಿಳಾ ಕಾರ್ಮಿಕರ ಪಾಲ್ಗೊಳ್ಳುವಿಕೆ ಶೇ 50.15ಕ್ಕೆ ಹೆಚ್ಚಿಸುವಲ್ಲಿ ಲಕ್ಷ್ಮೇಶ್ವರ ತಾಲ್ಲೂಕು ಪಂಚಾಯ್ತಿ ಯಶಸ್ವಿಯಾಗಿದೆ.

ಮಹಿಳೆಯರಲ್ಲಿ ಸ್ವಾವಲಂಬಿ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ತಾಲ್ಲೂಕು ಪಂಚಾಯ್ತಿ ವತಿಯಿಂದ ಕೈಗೊಳ್ಳಲಾದ ವಿಶೇಷ ಕಾಳಜಿ ಸದ್ಯ ಮೆಚ್ಚುಗೆಗೆ ಪಾತ್ರವಾಗಿದೆ.

ನರೇಗಾದಡಿ ಸಮಾನ ಕೂಲಿ ಸಿಗುತ್ತದೆ. ಹೀಗಿದ್ದರೂ ಯೋಜನೆ ಕಾಮಗಾರಿಗಳಲ್ಲಿ ಮಹಿಳಾ ಕಾರ್ಮಿಕರ ಪಾಲ್ಗೊಳ್ಳುವಿಕೆ ಕಡಿಮೆ ಇತ್ತು. ಇದನ್ನು ಮನಗಂಡ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಅವರು ಮಹಿಳೆಯರಿಗೆ ಹೆಚ್ಚು ಹೆಚ್ಚು ಉದ್ಯೋಗ ಖಾತ್ರಿ ಕೆಲಸದಲ್ಲಿ ತೊಡಗಿಸಲು ಎಲ್ಲ ಪಿಡಿಒ ಮತ್ತು ಪಂಚಾಯತಿ ಸಿಬ್ಬಂದಿಗೆ ನಿರ್ದೇಶನ ನೀಡಿದ ಪರಿಣಾಮ ತಾಲ್ಲೂಕಿನಲ್ಲಿ ಮಹಿಳಾ ಕೆಲಸಗಾರರ ಪ್ರಮಾಣದಲ್ಲಿ ಏರಿಕೆಯಾಗಿದೆ.

ADVERTISEMENT

ಪುರುಷ, ಮಹಿಳೆ ಎಂಬ ತಾರತಮ್ಯ ಇಲ್ಲದೆ ಪ್ರತಿ ಕುಟುಂಬಕ್ಕೆ 100 ದಿನ ಉದ್ಯೋಗ ಪಡೆಯಬಹುದಾಗಿದೆ. ಯೋಜನೆಯಡಿ ಒಂದು ದಿನಕ್ಕೆ ₹349 ಕೂಲಿ ನೀಡಲಾಗುತ್ತದೆ. ಸಮಾನ ವೇತನ ನೀತಿ, ನೇರವಾಗಿ ಬ್ಯಾಂಕ್ ಖಾತೆಗೆ ಹಣ ಸಂದಾಯ ಇದ್ದರೂ ಯೋಜನೆಯ ಕಾಮಗಾರಿಗಳಲ್ಲಿ ಮಹಿಳಾ ಕಾರ್ಮಿಕರ ಪಾಲ್ಗೊಳ್ಳುವಿಕೆ ಕಡಿಮೆ ಇತ್ತು. ಪುರುಷ ಕಾರ್ಮಿಕರಿಗೆ ಹೋಲಿಕೆ ಮಾಡಿದರೆ ಮಹಿಳೆಯರ ಪಾಲ್ಗೊಳ್ಳುವಿಕೆ ಶೇ46-47ರಷ್ಟು ಮಾತ್ರ ಇತ್ತು. ಉದ್ಯೋಗ ಖಾತ್ರಿಯತ್ತ ಮಹಿಳೆಯರನ್ನು ಸೆಳೆಯುವಲ್ಲಿ ತಾಲ್ಲೂಕು ಪಂಚಾಯ್ತಿ ಯಶಸ್ವಿಯಾಗಿದೆ.

ಸ್ವಸಹಾಯ ಗುಂಪುಗಳ ನೆರವು: ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು, ತಾಲ್ಲೂಕುಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯ್ತಿ ಗಣಕಯಂತ್ರ ನಿರ್ವಾಹಕರು, ಗ್ರಾಮ ಕಾಯಕ ಮಿತ್ರರು ಸೇರಿ ಗ್ರಾಮಗಳಲ್ಲಿನ ಮಹಿಳಾ ಸ್ವಸಹಾಯ ಗುಂಪುಗಳ ಸಹಯೋಗದಲ್ಲಿ ಸಭೆ ನಡೆಸಿ ಯೋಜನೆಯ ಉದ್ದೇಶ ಮತ್ತು ಮಹತ್ವದ ಬಗ್ಗೆ ಮನವರಿಕೆ ಮಾಡಿಕೊಡುವುದರ ಮೂಲಕ
ಸಮುದಾಯ ಕಾಮಗಾರಿಗಳತ್ತ ಮಹಿಳೆಯರನ್ನು ಸೆಳೆಯುವ ಕೆಲಸ ಮಾಡಿದ್ದರು. ಕೆಲ ಗ್ರಾಮಗಳಲ್ಲಿ ಮಹಿಳೆಯರಿಗೆ ಪ್ರತ್ಯೇಕ ಕೆಲಸ ಹಂಚಿಕೆ ಮಾಡಿಕೊಡಲಾಗಿದೆ.

ತಾಲ್ಲೂಕಿನ ಒಟ್ಟು ಮಹಿಳೆಯರ ಪಾಲ್ಗೊಳ್ಳುವಿಕೆ ಪ್ರಮಾಣ ಶೇ 50.15ರಷ್ಟಿದೆ. ಶಿಗ್ಲಿ ಶೇ 55.99, ಆದರಹಳ್ಳಿ 54.74, ಯಳವತ್ತಿ 53.76, ಬಾಲೆಹೊಸೂರ 50.95, ಗೋವನಾಳ 50.0, ಮಾಡಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಶೇ43ರಷ್ಟಿದೆ. 

ಮಹಿಳೆಯರಲ್ಲಿ ಯೋಜನೆ ಬಗ್ಗೆ ಅರಿವು ಮೂಡಿಸುವಲ್ಲಿ ಯಶಸ್ವಿಯಾಗಿದ್ದೇವೆ. ವೈಯಕ್ತಿಕ ಕಾಮಗಾರಿಗಳಲ್ಲಿ ಹೆಚ್ಚು ಮಹಿಳೆಯರನ್ನು ತೊಡಗಿಸಲು ಕ್ರಮ ಕೈಗೊಳ್ಳಲಾಗುವುದು
ಕೃಷ್ಣಪ್ಪ ಧರ್ಮರ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ
ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದರೆ ದಿನಕ್ಕೆ ₹349 ಪಗಾರ ಸಿಗುತ್ತದೆ.
ಇದರಿಂದ ಅನುಕೂಲ ಆಗಿದೆ ಲಕ್ಷ್ಮವ್ವ ಹರದಗಟ್ಟಿ ಗ್ರಾಮ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.