ADVERTISEMENT

ಟ್ರಕ್ ಟರ್ಮಿನಲ್ ವಿವಾದಕ್ಕೆ ಶೀಘ್ರ ಪರಿಹಾರ: ಗೋಪಾಲಯ್ಯ ಭರವಸೆ

ಕಂದಾಯ ಸಚಿವ ಆರ್‌. ಅಶೋಕ ನೇತೃತ್ವದಲ್ಲಿ ಸ್ಥಳ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 3 ಮೇ 2022, 5:10 IST
Last Updated 3 ಮೇ 2022, 5:10 IST
ಗೋಪಾಲಯ್ಯ
ಗೋಪಾಲಯ್ಯ   

ಹಾಸನ: ನಗರದ ಹೇಮ ಗಂಗೋತ್ರಿ ಬಳಿ ನಿರ್ಮಿಸುತ್ತಿರುವ ಟ್ರಕ್ ಟರ್ಮಿನಲ್ ಕಾಮಗಾರಿಯ ವಿವಾದವನ್ನು ಮೂರ್ನಾಲ್ಕು ದಿನಗಳಲ್ಲಿ ಬಗೆಹರಿಸಲಾಗು ವುದು ಎಂದು ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಮಗಾರಿಯನ್ನು ಸದ್ಯಕ್ಕೆ ನಿಲ್ಲಿಸಲಾಗಿದೆ. ಟ್ರಕ್‌ ಅರ್ಮಿನಲ್‌ ವಿಚಾರವಾಗಿ ಜೆಡಿಎಸ್‌– ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಈ ವಿಚಾರವನ್ನು ಸಿ.ಎಂ ಗಮನಕ್ಕೆ ತರಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆಯಂತೆ ಕಂದಾಯ ಸಚಿವ ಆರ್.ಅಶೋಕ್‌ ಅವರು ಶೀಘ್ರವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ವಿವಾದ ಬಗೆಹರಿಸಲಿದ್ದಾರೆ. ಆ ಜಾಗದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

ಇದಕ್ಕೆ ಸಂಬಂಧಪಟ್ಟ ಕಡತವನ್ನು ಕಂದಾಯ ಸಚಿವರಿಗೆ ಕಳುಹಿಸಲಾಗಿದೆ. ಅಶೋಕ್‌ ಅವರು ಹಿರಿಯರು, ಅನುಭವಿ ಇದ್ದಾರೆ. ಅವರೇ ಸಂಬಂಧಪಟ್ಟವರ ಜತೆ ಸಭೆ ನಡೆಸಿ, ಕಾನೂನು ಪ್ರಕಾರ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.

ADVERTISEMENT

ತಾಲ್ಲೂಕು ಕಚೇರಿ ಕಟ್ಟಡ ನೆಲಸಮ ಮಾಡುವ ಕುರಿತು ಹಿಂದೆಯೇ ತೀರ್ಮಾನ ಕೈಗೊಳ್ಳಲಾಗಿತ್ತು.40 ವರ್ಷದ ಕಟ್ಟಡಗಳನ್ನು ತೆರವು ಮಾಡುವಂತೆ ಈಗಾಗಲೇ ನಿರ್ಧರಿಸಲಾಗಿದ್ದು, ಟ್ರಾಫಿಕ್ ಸಮಸ್ಯೆ ಕಾರಣಕ್ಕೆ ರಾತ್ರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಮಾಡಲಾಗಿಲ್ಲ ಎಂದು ಸಚಿವರು ಸಮರ್ಥಿಸಿಕೊಂಡರು.

ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಯಾವುದೇ ಪಕ್ಷದ ನಾಯಕರು ತಡೆಯೊಡ್ಡುವುದು ಸರಿಯಲ್ಲ. ಅಭಿವೃದ್ಧಿಗೆ ಬೆಂಬಲ ನೀಡುವ ಮೂಲಕ ಉತ್ತಮ ಆಡಳಿತಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.

‘ಪದೇ ಪದೇ ನಾಯಕತ್ವ ಬದಲಾವಣೆಯೇ ಬಿಜೆಪಿಯ ಶಕ್ತಿ’ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಬಿಜೆಪಿ ನಮ್ಮನ್ನು ಗೌರವಯುತವಾಗಿ ನಡೆಸಿಕೊಂಡಿದೆ. ಅಲ್ಲದೆ ಎರಡು ಜಿಲ್ಲೆಗಳ ಉಸ್ತುವಾರಿ ಸಹ ನೀಡಿದೆ. ವರಿಷ್ಠರು ಕೈಗೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರುತ್ತವೆ ಎಂದರು.

ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.