ಹಾಸನ: ದಸರಾ ಹಬ್ಬದ ರಜೆಯಲ್ಲಿ ತರಗತಿ ನಡೆಸಿ, ಹಿಂದೂಗಳ ಧಾರ್ಮಿಕ ಆಚರಣೆಗೆ ಧಕ್ಕೆ ತರುವುದು ಇತರ ಧರ್ಮಗಳ ಹಬ್ಬದ ಅವಧಿಯಲ್ಲಿ ರಜೆ ನೀಡುವ ಮೂಲಕ ಮತಾಂತರಕ್ಕೆ ಪ್ರೇರಣೆ ನೀಡುತ್ತಿರುವುದನ್ನು ನಿಲ್ಲಿಸಬೇಕು ಎಂದು ಶ್ರೀರಾಮ ಸೇನೆ ಜಿಲ್ಲಾ ಘಟಕದ ಸದಸ್ಯರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಶ್ರೀರಾಮ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಹೇಮಂತ್ ಜಾನೇಕೆರೆ ಮಾತನಾಡಿ, ಹಲವಾರು ವರ್ಷಗಳಿಂದ ರಾಜ್ಯದಲ್ಲಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ದಸರಾ ರಜೆ ನೀಡುವುದು ಆಚರಣೆಯಲ್ಲಿದೆ. ಆದರೆ ಇತ್ತೀಚಿಗೆ ಉದ್ದೇಶಪೂರ್ವಕವಾಗಿ ಹಿಂದೂ ವಿದ್ಯಾರ್ಥಿಗಳು ಧಾರ್ಮಿಕ ಆಚರಣೆಯಲ್ಲಿ ಭಾಗವಹಿಸದಂತೆ ತಡೆಯಲು ದಸರಾ ಹಬ್ಬದ ಸಮಯದಲ್ಲಿ ಕೆಲ ಶಾಲೆಗಳು ಪರೀಕ್ಷೆ ಸೇರಿದಂತೆ ಇತರೆ ಚಟುವಟಿಕೆಗಳ ಮೂಲಕ ಮಕ್ಕಳಿಗೆ ಒತ್ತಡ ಹೇರುತ್ತಿವೆ ಎಂದು ಆರೋಪಿಸಿದರು.
ದಸರಾ ಸಂದರ್ಭದಲ್ಲಿ ಎಲ್ಲ ಖಾಸಗಿ ಶಾಲೆಗಳಲ್ಲಿ ರಜೆ ನೀಡಬೇಕು. ಕ್ರಿಸ್ಮಸ್ ಸಂದರ್ಭದಲ್ಲಿ ಶಾಲೆಗಳಿಗೆ ರಜೆ ನೀಡುವುದರ ಹಿಂದೆ ದೊಡ್ಡ ಪಿತೂರಿ ಅಡಗಿದ್ದು, ಶೇ 90ರಷ್ಟು ಹಿಂದೂ ಮಕ್ಕಳು ಓದುತ್ತಿರುವ ಶಾಲೆಯಲ್ಲಿ ಕ್ರಿಸ್ಮಸ್ ರಜೆ ನೀಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಕೂಡಲೇ ದಸರಾ ರಜೆ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಇಲ್ಲವಾದರೆ ಆಯಾ ಖಾಸಗಿ ಶಾಲೆಗಳಿಗೆ ಬೀಗ ಜಡಿದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
ಪ್ರದೀಪ್, ಎಡೆಯೂರು ಕುಮಾರ್, ಮಂಜುನಾಥ್ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.