ಹಾಸನ: ಜಿಲ್ಲಾ ಸರ್ಕಾರಿ, ಅರೆ ಸರ್ಕಾರಿ ಹಾಗೂ ನಿಗಮ ಮಂಡಳಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ಹಾಗೂ ಜಿಲ್ಲಾ ರಾಜ್ಯ ಸರ್ಕಾರಿ ನೌಕರರ ಕೋ–ಆಪರೇಟಿವ್ ಸೊಸೈಟಿ ಸಹಯೋಗದಲ್ಲಿ ಡಿ.8ರಿಂದ 10ರವರೆಗೆ ‘ಕೋ–ಆಪರೇಟಿವ್ ಕಪ್’ ಕ್ರಿಕೆಟ್ ಟೂರ್ನಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ. ಶ್ರೀನಿವಾಸ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಉದ್ಘಾಟನೆ ನೆರವೇರಿಸಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್.ಪೂರ್ಣಿಮಾ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ, ಉಪ ವಿಭಾಗಾಧಿಕಾರಿ ಜೆ.ಬಿ. ಮಾರುತಿ, ತಹಶೀಲ್ದಾರ್ ಶ್ವೇತಾ ರವೀಂದ್ರ ಭಾಗವಹಿಸಲಿದ್ದಾರೆ’ ಎಂದರು.
‘ಡಿ.10ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಪಂದ್ಯಾವಳಿಯಲ್ಲಿ ವಿಜೇತರಾದ ತಂಡಗಳಿಗೆ ಅಂತರ ರಾಷ್ಟ್ರೀಯ ಮಾಜಿ ಕ್ರಿಕೆಟ್ ಆಟಗಾರ ಡೇವಿಡ್ ಜಾನ್ಸನ್ ಬಹುಮಾನ ವಿತರಣೆ ಮಾಡಲಿದ್ದಾರೆ. ರಣಜಿ ಮಾಜಿ ಕ್ರಿಕೆಟ್ ಆಟಗಾರ ಎ.ಆರ್. ಮಹೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎನ್. ಮಂಜುಳಾ ಭಾಗವಹಿಸಲಿದ್ದಾರೆ. ಪಂದ್ಯಾವಳಿಯಲ್ಲಿ ಭಾಗವಹಿಸುವ 27 ತಂಡಗಳಿಗೆ ಟಿ–ಶರ್ಟ್, ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ’ ಎಂದು ಹೇಳಿದರು.
ಪರಮೇಶ್, ಜಿ.ಪಿ. ವಿಶ್ವನಾಥ್, ಯಶೋಧರ, ರಾಜಶೇಖರಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.