ಹಾಸನ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದೇಶ ಆರ್ಥಿಕ ಸಂಕಷ್ಟದಲ್ಲಿದೆ ಎಂದು ವಿಧಾನ ಪರಿಷತ್ ಸದಸ್ಯ ವಿ.ಎಸ್. ಉಗ್ರಪ್ಪ ಹೇಳಿದರು.
ಹಾಸನಾಂಬ ದೇವಿ ದರ್ಶನ ಪಡೆದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಅಂತರರಾಷ್ಟ್ರೀಯ
ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆ ಇದ್ದರೂ ದರ ಹೆಚ್ಚಾಗಿದೆ. ನೆರೆಯ ದೇಶಗಳಲ್ಲಿ ಬೆಲೆ ಕಡಿಮೆಯಿದ್ದರೂ ಭಾರತದಲ್ಲಿ ಮಾತ್ರ ದೊಡ್ಡ ಮಟ್ಟದಲ್ಲಿ ಬೆಲೆ ಏರಿಕೆ ಆಗಿದೆ. ರಾಜ್ಯ, ಕೇಂದ್ರ ಸರ್ಕಾರ ತೆರಿಗೆ ಏರಿಕೆ ಮಾಡಿದೆ. ಇದೆಲ್ಲವನ್ನೂ ಬದಲಾಯಿಸುವ ಮನಸ್ಸು ದೇವಿ ಕೊಡಲೆಂದು ಪ್ರಾರ್ಥಿಸಿದ್ದೇನೆ ಎಂದರು.
ಉಪ ಚುನಾವಣೆ ಫಲಿತಾಂಶ ಬಂದಿದೆ. ಜನರ ತೀರ್ಪನ್ನು ಮುಕ್ತ ಮನಸ್ಸಿನಿಂದ ಸ್ವೀಕಾರ ಮಾಡುತ್ತೇವೆ. ಎರಡೂ ರಾಷ್ಟ್ರೀಯ ಪಕ್ಷಗಳು ಜನರ ಮನಸ್ಸಿನ ನೋವು ಅರ್ಥ ಮಾಡಿಕೊಂಡು ನಡೆಯಬೇಕು. ಮುಂದಿನ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿದರು.
ಬಿಜೆಪಿ ಹಿರಿಯ ನಾಯಕ ಈಶ್ವರಪ್ಪ ಅವರು ಉಪ ಮುಖ್ಯಮಂತ್ರಿ ಆಗಿದ್ದರು. ಹಿರಿತನ ಅರ್ಥ ಮಾಡಿಕೊಂಡು ಮಾತನಾಡುವುದು ಒಳ್ಳೆಯದು. ಹಿಂದೆ ಕಾಂಗ್ರೆಸ್ ಮುಕ್ತ ಭಾರತ ಮಾಡುವುದಾಗಿ ಘೋಷಣೆ ಹಾಕಿದ್ದರು. ಹೈಕಮಾಂಡ್ ಓಲೈಕೆಗೆ ಕಾಂಗ್ರೆಸ್ ಟೀಕಿಸುವುದು ಸರಿಯಲ್ಲ. ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಸಲಹೆ ನೀಡಿದರು.
ಕಾಂಗ್ರೆಸ್ ನಲ್ಲಿ ಯಾವುದೇ ಗುಂಪುಗಳಿಲ್ಲ. ಒಂದೇ ಮನೆ, ಸೋನಿಯಾ ಗಾಂಧಿ, ಸಿದ್ದರಾಮಯ್ಯ ನಾಯಕತ್ವದಲ್ಲಿ ಪಕ್ಷ ಕಟ್ಟುವ ಕೆಲಸ ಆಗುತ್ತಿದೆ. ಮುಂದಿನ ವಿಧಾನಸಭಾ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವುದರಲ್ಲಿ ಕಾಂಗ್ರೆಸ್ ತ್ಯಾಗ, ಬಲಿದಾನ ಮಾಡಿದೆ. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಕಡಿಮೆ ಆಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.