ADVERTISEMENT

ಬೆಂಗಳೂರಿನಲ್ಲಿ ಉದ್ಯೋಗ ಮೇಳ: ಇದುವರೆಗೆ ಹಾಸನ ಜಿಲ್ಲೆಯಿಂದ 548 ಮಂದಿ ನೋಂದಣಿ

ಫೆ.26, 27ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ: ಜಿಲ್ಲಾಧಿಕಾರಿ ಸತ್ಯಭಾಮಾ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2024, 12:55 IST
Last Updated 21 ಫೆಬ್ರುವರಿ 2024, 12:55 IST
ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ವತಿಯಿಂದ ಫೆ. 26 ಮತ್ತು 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜನೆಗೊಂಡಿರುವ ರಾಜ್ಯಮಟ್ಟದ ಉದ್ಯೋಗ ಮೇಳದ ಭಿತ್ತಿಪತ್ರಗಳನ್ನು ಹಾಸನದಲ್ಲಿ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಅನಾವರಣಗೊಳಿಸಿದರು
ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ವತಿಯಿಂದ ಫೆ. 26 ಮತ್ತು 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜನೆಗೊಂಡಿರುವ ರಾಜ್ಯಮಟ್ಟದ ಉದ್ಯೋಗ ಮೇಳದ ಭಿತ್ತಿಪತ್ರಗಳನ್ನು ಹಾಸನದಲ್ಲಿ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಅನಾವರಣಗೊಳಿಸಿದರು   

ಹಾಸನ: ಮುಖ್ಯಮಂತ್ರಿ ಉಪಸ್ಥಿತಿಯಲ್ಲಿ ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದು, ಜಿಲ್ಲೆಯ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಸತ್ಯಭಾಮಾ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೆ ಜಿಲ್ಲೆಯಿಂದ 548 ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಂಡಿದ್ದಾರೆ ಎಂದರು.

ಉದ್ಯೋಗ ಮೇಳಕ್ಕೆ ಎಲ್ಲ ವಲಯಗಳಿಂದ 500ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್, ಮಧ್ಯಮ, ಸಣ್ಣ ಸಂಸ್ಥೆಗಳು ಭಾಗವಹಿಸಲಿದ್ದು, ರಾಜ್ಯದ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲೆಯ ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್‌, ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ವಿದ್ಯಾಭ್ಯಾಸ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳಿಗೆ ಈ ಅವಕಾಶವನ್ನು ಬಳಸಿಕೊಳ್ಳುವಂತೆ ತಿಳಿಸಿದರು.

ADVERTISEMENT

ನಿರುದ್ಯೋಗಿ ಯುವಕ, ಯುವತಿಯರು http://skillconnect.kaushalkar.com ಮೂಲಕ ನೋಂದಣಿ ಮಾಡಿಸಿ, ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಸಹಾಯವಾಣಿ ಸಂಖ್ಯೆ 18005999918 ಸಂಪರ್ಕಿಸಬಹುದಾಗಿದೆ ಎಂದರು.

ಜಿಲ್ಲೆಯ ಎಲ್ಲ ಕಾಲೇಜಿನ ಪ್ರಾಂಶುಪಾಲರು ಮತ್ತು ನೇಮಕಾತಿ ಅಧಿಕಾರಿಗಳಿಗೆ ಮಾಹಿತಿ ನೀಡಿ, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ನೋಂದಣಿ ಮಾಡಿಸಿ ಉದ್ಯೋಗ ಮೇಳದಲ್ಲಿ ಭಾಗವಹಿಸಲು ತಿಳಿಸಲಾಗಿದೆ. ಜಿಲ್ಲೆಯ ಎಲ್ಲೆಡೆ ಈ ಸಂಬಂಧ ಮಾಹಿತಿ ನೀಡಿದ್ದು, ನಿರುದ್ಯೋಗಿಗಳು ಉದ್ಯೋಗ ಮೇಳಕ್ಕೆ ನೋಂದಾಯಿಸಿಕೊಳ್ಳುವಂತೆ ಹಾಗೂ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಕ್ರಮ ವಹಿಸುವಂತೆ ಇಲಾಖೆಗಳ ಮುಖ್ಯಸ್ಥರಿಗೆ ತಿಳಿಸಲಾಗಿದೆ ಎಂದರು.

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ತ್ಯಾಜ್ಯ ವಿಲೇವಾರಿ ಮಾಡುವ ವಾಹನಗಳಲ್ಲಿ ಶ್ರವ್ಯ ಮಾಧ್ಯಮದ ಮೂಲಕ ಹಾಗೂ ಸ್ವಸಹಾಯ ಸಂಘಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಲಾಗಿದೆ. ಧ್ವನಿಸುರುಳಿ, ಭಿತ್ತಿಪತ್ರಗಳು ಮತ್ತು ವಿಡಿಯೊ ತುಣುಕುಗಳ ಮೂಲಕ ಪ್ರಚಾರ ಮಾಡಲು ತಿಳಿಸಲಾಗಿದೆ ಎಂದರು.

ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳು, ಜಿಲ್ಲಾಡಳಿತದ ಎಲ್ಲ ಸಾಮಾಜಿಕ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಂಡಿದ್ದು, ಅಂಗವಿಕಲರ ಕಲ್ಯಾಣ ಇಲಾಖೆಯ ವತಿಯಿಂದ ವಿಕಲಚೇತನ ಉದ್ಯೋಗಕಾಂಕ್ಷಿಗಳನ್ನು ಸಜ್ಜುಗೊಳಿಸಲಾಗಿದೆ ಎಂದರು. ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಶಿವಕುಮಾರ್, ಸಹಾಯಕ ನಿರ್ದೇಶಕ ಕೃಷ್ಣೇಗೌಡ, ವಾರ್ತಾಧಿಕಾರಿ ಮೀನಾಕ್ಷಮ್ಮ, ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.