ಅರಸೀಕೆರೆ: ಇಲ್ಲಿನ ನಗರಸಭೆ ಪ್ರಭಾರ ಅಧ್ಯಕ್ಷರಾಗಿ, ಉಪಾಧ್ಯಕ್ಷ ಕಾಂತೇಶ್ ಅಧಿಕಾರ ಸ್ವೀಕರಿಸಿದರು.
ಕೆಲವು ದಿನಗಳ ಹಿಂದೆ ನಗರಸಭೆ ಅಧ್ಯಕ್ಷ ಗಿರೀಶ್ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ, ಮೈಸೂರು ಪ್ರಾದೇಶಿಕ ಆಯುಕ್ತರ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನದ ಪ್ರಭಾರವನ್ನು ಕಾಂತೇಶ್ ವಹಿಸಿಕೊಂಡರು.
ನಗರಸಭೆ ಕಚೇರಿಯಲ್ಲಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಕಾಂತೇಶ್, ‘ನನಗೆ ಓದಗಿರುವ ಪ್ರಭಾರ ಅಧ್ಯಕ್ಷ ಸ್ಥಾನದ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು, ಶಾಸಕ ಕೆ.ಎಂ. ಶಿವಲಿಂಗೇಗೌಡರು ಹಾಗೂ ಎಲ್ಲ ಸದಸ್ಯರ ವಿಶ್ವಾಸ ಪಡೆದು ಪಕ್ಷಾತೀತವಾಗಿ ನಗರದ ಅಭಿವೃದ್ಧಿ ಹಾಗೂ ಮೂಲ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತೇನೆ’ ಎಂದರು.
ಮುಖ್ಯವಾಗಿ ನಗರದ ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು. ಬೇಸಿಗೆ ಶುರುವಾಗಿದ್ದು ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕಸ ಸಂಗ್ರಹ ಮತ್ತು ವಿಲೇವಾರಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.
ನಗರಸಭೆ ಕೆಲವು ಸದಸ್ಯರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು, ಸಂಘ ಸಂಸ್ಥೆಗಳ ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.