ADVERTISEMENT

ಮಳೆಹಾನಿ ಪೀಡಿತ ಪ್ರದೇಶಗಳಿಗೆ ಶಾಸಕ ಸ್ವರೂಪ್ ಪ್ರಕಾಶ್ ಭೇಟಿ ಪರಿಶೀಲನೆ

ರಾಜಕಾಲುವೆ ಒತ್ತುವರಿ, ಅವೈಜ್ಞಾನಿಕ ಬಡಾವಣೆ ನಿರ್ಮಾಣ ಆರೋಪ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2024, 7:27 IST
Last Updated 22 ಅಕ್ಟೋಬರ್ 2024, 7:27 IST
   

ಹಾಸನ: ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ನಗರದ ಬಡಾವಣೆಗಳಿಗೆ ನೀರು ನುಗ್ಗಿದ್ದು, ಮಂಗಳವಾರ ಬೆಳಿಗ್ಗೆ ಶಾಸಕ ಸ್ವರೂಪ್ ಪ್ರಕಾಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಮಹಾಲಕ್ಷ್ಮಿ ಲೇಔಟ್, ಹಾಸನಂಬ ಬಡಾವಣೆ, ಉದ್ದೂರು ಸೇರಿದಂತೆ ಹಲವು ಬಡಾವಣೆಗಳು ಜಲಾವೃತಗೊಂಡಿದ್ದು, ಬಡಾವಣೆ ನಿವಾಸಿಗಳು ಹೊರಬರಲಾರದೆ ಪರದಾಡುವಂತಾಗಿದೆ. ರಸ್ತೆಗಳು ಕೂಡ ಸಂಪೂರ್ಣವಾಗಿ ಜಲಾವೃತವಾಗಿದ್ದು, ವಿವಿಧಡೆ ಸಂಪರ್ಕ ಕಡಿತಗೊಂಡಿದೆ.

ಕೆಲವೆಡೆ ಕೆರೆಗಳು ಕೊಡಿ ಬಿದ್ದು ರಸ್ತೆಯ ಮೇಲೆ ನೀರು ಹರಿಯುತ್ತಿರುವುದರಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ. ಯಾವುದೇ ಅನಾಹುತ ಸಂಭವಿಸದಂತೆ ರಸ್ತೆಗಳಿಗೆ ಅಡ್ಡಲಾಗಿ ಬ್ಯಾರಿಕೇಡ್ ಹಾಕಿ ಪೊಲೀಸರು ಕಾದು ಕುಳಿತಿದ್ದಾರೆ. ಪರ್ಯಾಯ ರಸ್ತೆ ಮೂಲಕ ವಾಹನಗಳನ್ನು ಕಳುಹಿಸಲಾಯಿತು.

ADVERTISEMENT

ರಾಜಕಾಲುವೆ ಒತ್ತುವರಿ ಹಾಗೂ ಅವೈಜ್ಞಾನಿಕ ಬಡಾವಣೆಗಳ ನಿರ್ಮಾಣವೇ ಇದಕ್ಕೆಲ್ಲ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸಮಸ್ಯೆಗಳನ್ನು ಆಲಿಸಿದ ಶಾಸಕ ಸ್ವರೂಪ ಪ್ರಕಾಶ್, ಈ ಬಗ್ಗೆ ಕೂಡಲೇ ಸರ್ಕಾರಕ್ಕೆ ಪತ್ರ ಬರೆದು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದು ಶೀಘ್ರವಾಗಿ ರಾಜಕಾಲುವೆ ಒತ್ತುವರಿ ತೆರವು ಮಾಡಲಾಗುವುದು ಎಂದರು.

ಖಾಸಗಿ ಲೇಔಟ್‌ಗಳು ತರಾತುರಿಯಲ್ಲಿ ಅವೈಜ್ಞಾನಿಕ ಕಾಮಗಾರಿ ನಡೆಸಿದ್ದರಿಂದ ಈ ರೀತಿಯ ಸಮಸ್ಯೆ ಉಂಟಾಗುತ್ತಿದೆ. ಮುಂದಿನ ದಿನಗಳಲ್ಲಿ ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಗಮನಕ್ಕೆ ತಂದು, ಇಂತಹ ವೈಜ್ಞಾನಿಕ ಕಾಮಗಾರಿಗಳಿಗೆ ಕಡಿವಾಣ ಹಾಕುವ ಕೆಲಸ ಮಾಡಲಾಗುವುದು ಎಂದರು.

ನಗರಸಭೆ ಅಧ್ಯಕ್ಷ ಎಂ.ಚಂದ್ರೇಗೌಡ, ನಗರಸಭೆ ಆಯುಕ್ತ ನರಸಿಂಹಮೂರ್ತಿ, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸ್ಥಳೀಯರು ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.