ADVERTISEMENT

ಹಾಸನ | ಒಬ್ಬ ಬಾಲಕಾರ್ಮಿಕ, 8 ಕಿಶೋರ ಕಾರ್ಮಿಕರ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2024, 15:53 IST
Last Updated 3 ಸೆಪ್ಟೆಂಬರ್ 2024, 15:53 IST
ಹಾಸನ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿಷೇಧದ ಕುರಿತು ಅಂಗಡಿ ಮಾಲೀಕರಲ್ಲಿ ಜಾಗೃತಿ ಮೂಡಿಸಲಾಯಿತು.
ಹಾಸನ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿಷೇಧದ ಕುರಿತು ಅಂಗಡಿ ಮಾಲೀಕರಲ್ಲಿ ಜಾಗೃತಿ ಮೂಡಿಸಲಾಯಿತು.   

ಹಾಸನ: ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಕಾರ್ಮಿಕ ಆಯುಕ್ತರ ನಿರ್ದೇಶನದಂತೆ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಗಸ್ಟ್‌ 1ರಿಂದ 31ರವರೆಗೆ ಜಿಲ್ಲೆಯ ಎಲ್ಲ ತಾಲ್ಲೂಕಿನಾದ್ಯಂತ ಅಂಗಡಿ, ಗ್ಯಾರೇಜ್, ಬಾರ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು.

ಒಬ್ಬ ಬಾಲಕಾರ್ಮಿಕ ಹಾಗೂ 8 ಕಿಶೋರ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಪಾಲನೆ-ಪೋಷಣೆ, ರಕ್ಷಣೆಯ ಹಿತದೃಷ್ಟಿಯಿಂದ ಈ ಮಕ್ಕಳನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ವಶಕ್ಕೆ ಒಪ್ಪಿಸಲಾಗಿದೆ.

ಮಕ್ಕಳನ್ನು ಕಾನೂನು ಬಾಹಿರವಾಗಿ ಕೆಲಸಕ್ಕೆ ನೇಮಿಸಿಕೊಂಡಿದ್ದ ಮಾಲೀಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು. 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಉದ್ಯಮಿಯಲ್ಲಿ ಹಾಗೂ 14 ರಿಂದ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಕೆಲಸದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಮಕ್ಕಳು ಕೆಲಸದಲ್ಲಿ ತೊಡಗಿರುವುದು ಕಂಡು ಬಂದಲ್ಲಿ ಕಾರ್ಮಿಕ ಸಹಾಯವಾಣಿ 155214 ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ದೂರವಾಣಿ ಸಂಖ್ಯೆ-08172-235447 ಹಾಗೂ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ.

ADVERTISEMENT

ಕಾರ್ಯಾಚರಣೆಯ ವೇಳೆ ಬಾಲ ಕಾರ್ಮಿಕ ಪದ್ಧತಿಯ ವಿರುದ್ಧದ ಕರಪತ್ರ ಹಾಗೂ ಭಿತ್ತಿಪತ್ರ ಅಂಟಿಸುವ ಮೂಲಕ ಸಾರ್ವಜನಿಕರು ಹಾಗೂ ಅಂಗಡಿ, ವಿವಿಧ ಸಂಸ್ಥೆಗಳ ಮಾಲೀಕರಲ್ಲಿ ಅರಿವು ಮೂಡಿಸಲಾಯಿತು.

ಆಯಾ ತಹಶೀಲ್ದಾರರು, ಕಾರ್ಮಿಕ ಅಧಿಕಾರಿಗಳು, ಕಾರ್ಮಿಕ ನಿರೀಕ್ಷಕರು, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳು, ನಗರಸಭೆ ಮುಖ್ಯಾಧಿಕಾರಿ, ಸಮಾಜ ಕಲ್ಯಾಣಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಿಬ್ಬಂದಿ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಎಸ್.ಜೆ.ಪಿ.ಯು., ಮಕ್ಕಳ ಸಹಾಯವಾಣಿ ಸಿಬ್ಬಂದಿ ಮತ್ತು ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.