ಹಾಸನ: ಕುಟುಂಬದ ನಿರ್ವಹಣೆಯ ಜೊತೆಗೆ ಆಡಳಿತದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಬಹುದು ಎನ್ನುವುದನ್ನು ಹಾಸನ ಜಿಲ್ಲೆಯಲ್ಲಿ ಮಹಿಳೆಯರು ಸಾಧಿಸಿ ತೋರಿಸಿದ್ದಾರೆ. ಜಿಲ್ಲೆಯ ಪ್ರಮುಖ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಅಧಿಕಾರಿಗಳು, ಚೊಕ್ಕದಾಗಿ ಆಡಳಿತ ನಡೆಸುವ ಮೂಲಕ ಸೈ ಎನಿಸಿಕೊಂಡಿದ್ದಾರೆ.
ಜಿಲ್ಲಾಧಿಕಾರಿಯಾಗಿ ಸಿ. ಸತ್ಯಭಾಮಾ, ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿಯಾಗಿ ಬಿ.ಆರ್. ಪೂರ್ಣಿಮಾ, ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕೆ.ಟಿ. ಶಾಂತಲಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮೊಹಮ್ಮದ್ ಸುಜೀತಾ ಕಾರ್ಯನಿರ್ವಹಿಸುತ್ತಿದ್ದಾರೆ.
ಜೊತೆಗೆ ಕೃಷಿ ಇಲಾಖೆ ಜಂಟಿ ನಿರ್ದೇಶಕಿಯಾಗಿ ರಾಜಸುಲೋಚನಾ, ಕಾರ್ಮಿಕ ಅಧಿಕಾರಿ ಯಮುನಾ, ಸಕಲೇಶಪುರ ಉಪ ವಿಭಾಗಾಧಿಕಾರಿ ಡಾ.ಶ್ರುತಿ, ಹಾಸನ ತಹಶೀಲ್ದಾರ್ ಶ್ವೇತಾ, ಬೇಲೂರು ತಹಶೀಲ್ದಾರ್ ಎಂ.ಮಮತಾ, ಸಕಲೇಶಪುರ ತಹಶೀಲ್ದಾರ್ ಮೇಘನಾ ಕಾರ್ಯ ನಿರ್ವಹಿಸುತ್ತಿದ್ದಾರೆ.
ಸತ್ಯಭಾಮಾ ಅವರು 2002 ರಲ್ಲಿ ಸರ್ಕಾರಿ ಸೇವೆಗೆ ಸೇರ್ಪಡೆಯಾಗಿದ್ದು, ಜಿಲ್ಲಾಧಿಕಾರಿಯಾಗಿ ಕೋಲಾರದಲ್ಲಿ ಸೇವೆ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಚಿತ್ರದುರ್ಗ, ಚಿಕ್ಕಬಳ್ಳಾಪುರದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ನಿರ್ದೇಶಕಿ, ರಾಜ್ಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕಿಯಾಗಿ ಸೇವೆ ಸಲ್ಲಿಸಿದ ನಂತರ ಹಾಸನ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದಾರೆ.
ಜಿಲ್ಲಾ ಪಂಚಾಯಿತಿ ಸಿಇಒ ಆಗಿರುವ ಬಿ.ಆರ್. ಪೂರ್ಣಿಮಾ, ಮಂಡ್ಯ ಜಿಲ್ಲೆಯ ಬೆಸಗರಹಳ್ಳಿ ಗ್ರಾಮದವರು. ಮೈಸೂರು ವಿಶ್ವವಿದ್ಯಾಲಯದಿಂದ ಸಮಾಜಶಾಸ್ತ್ರದಲ್ಲಿ ಎಂಎ ಪದವಿ ಪಡೆದು ಮೊದಲಿಗೆ ಉಪನ್ಯಾಸಕರಾಗಿ ಮತ್ತು ಅಬಕಾರಿ ಇಲಾಖೆಯಲ್ಲಿ ಅಬಕಾರಿ ನಿರೀಕ್ಷಕರಾಗಿ ಸೇವೆ ಸಲ್ಲಿಸಿದ್ದು, 2004ರಲ್ಲಿ ಕೆಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. 2006ರಲ್ಲಿ ಪಾಂಡವಪುರ ಉಪ ವಿಭಾಗಾಧಿಕಾರಿ, ಮಂಡ್ಯ ಜಿಲ್ಲೆಯ ಭೂಸ್ವಾಧೀನ ಅಧಿಕಾರಿ, ರಾಮನಗರ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಮಂಡ್ಯ, ಮೈಸೂರು ಮತ್ತು ಹಾಸನ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದಾರೆ.
ಬೆಳಗಾವಿ ಜಿಲ್ಲೆ ಯವರಾದ ಕೆ.ಟಿ. ಶಾಂತಲಾ ಅವರು ಹಾಸನದ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದು, ಚಿಕ್ಕಬಳ್ಳಾಪುರದಲ್ಲಿ ಉಪ ವಿಭಾಗಾಧಿಕಾರಿಯಾಗಿ, ರೇಷ್ಮೆ ಇಲಾಖೆ ಜಂಟಿ ನಿರ್ದೇಶಕಿಯಾಗಿ, ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವೆಯಾಗಿ, ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿರುವ ಮೊಹಮ್ಮದ್ ಸುಜೀತಾ ಅವರು, ಕೋಲಾರದಲ್ಲಿ ಎಸ್ಪಿಯಾಗಿ ಹಾಗೂ ಬೆಂಗಳೂರಿನಲ್ಲಿ ಡಿಸಿಪಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ತಮಿಳುನಾಡಿನ ಸುಜೀತಾ ಅವರು ಎಂಬಿಎ ಪದವೀಧರೆ. 2014ರಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಅವರು, ಎಸಿಪಿಯಾಗಿ ನಂಜನಗೂಡಿನಲ್ಲಿ ಸೇವೆ ಆರಂಭಿಸಿದರು.
ಹಾಸನ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಜಸುಲೋಚನಾ ಅವರು 2016 ರಿಂದ 2019 ರವರೆಗೆ ಮಂಡ್ಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ್ದು, ನಂತರ ತುಮಕೂರು ಜಿಲ್ಲೆಯಲ್ಲಿ 2020 ರಿಂದ 2022 ರವರೆಗೆ ಕಾರ್ಯನಿರ್ವಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.