ADVERTISEMENT

ಫಲಾನುಭವಿಗಳ ಸಮ್ಮೇಳನ ಮಾರ್ಚ್‌ 10ರಂದು 

25 ಸಾವಿರ ಫಲಾನುಭವಿಗಳು ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2023, 14:48 IST
Last Updated 6 ಮಾರ್ಚ್ 2023, 14:48 IST
ಕೇಂದ್ರ ಮತ್ತು ರಾಜ್ಯ ಸರ್ಕಾರದ ಪುರಸ್ಕೃತ ವಿವಿಧ ಯೋಜನೆಗಳ ಫಲಾನುಭವಿಗಳ ಜಿಲ್ಲಾ ಸಮ್ಮೇಳನದ ಪೂರ್ವ ಸಿದ್ಧತೆಯನ್ನು ಜಿಲ್ಲಾಧಿಕಾರಿ ರಘುನಂದನಮೂರ್ತಿ ಪರಿಶೀಲಿಸಿದರು. ಜಿಲ್ಲಾ ಪಂಚಾಯಿತಿ ಸಿಇಒ ಅಕ್ಷಯ ಶ್ರೀಧರ ಇದ್ದಾರೆ 
ಕೇಂದ್ರ ಮತ್ತು ರಾಜ್ಯ ಸರ್ಕಾರದ ಪುರಸ್ಕೃತ ವಿವಿಧ ಯೋಜನೆಗಳ ಫಲಾನುಭವಿಗಳ ಜಿಲ್ಲಾ ಸಮ್ಮೇಳನದ ಪೂರ್ವ ಸಿದ್ಧತೆಯನ್ನು ಜಿಲ್ಲಾಧಿಕಾರಿ ರಘುನಂದನಮೂರ್ತಿ ಪರಿಶೀಲಿಸಿದರು. ಜಿಲ್ಲಾ ಪಂಚಾಯಿತಿ ಸಿಇಒ ಅಕ್ಷಯ ಶ್ರೀಧರ ಇದ್ದಾರೆ    

ಹಾವೇರಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಪುರಸ್ಕೃತ ವಿವಿಧ ಯೋಜನೆಗಳ ಫಲಾನುಭವಿಗಳ ಜಿಲ್ಲಾ ಸಮ್ಮೇಳನವನ್ನು ಇದೇ ಮಾರ್ಚ್ 10ರಂದು ಹಾವೇರಿ ನಗರದಲ್ಲಿ ಆಯೋಜಿಸಲಾಗಿದೆ.

ಸೋಮವಾರ ಫಲಾನುಭವಿಗಳ ಸಮ್ಮೇಳನದ ಸಿದ್ಧತೆ ಹಾಗೂ ವೇದಿಕೆ ನಿರ್ಮಾಣ ಕುರಿತಂತೆ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಸಭೆ ನಡೆಸಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಅವರು, ಸಮಾರಂಭಕ್ಕೆ ಮುಖ್ಯಮಂತ್ರಿ ಆಗಮಿಸಲಿದ್ದಾರೆ, ಸಮ್ಮೇಳನಕ್ಕೆ ವಿವಿಧ ಯೋಜನೆಯಡಿ ಸೌಲಭ್ಯ ಪಡೆದ ಹಾಗೂ ಹೊಸದಾಗಿ ವಿವಿಧ ಯೋಜನೆಯಡಿ ಸೌಲಭ್ಯ ಮಂಜೂರಾದ ಅಂದಾಜು ₹25 ಸಾವಿರ ಫಲಾನುಭವಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಕ್ರೀಡಾಂಗಣ ಫಲಾನುಭವಿಗಳ ಸಮ್ಮೇಳನ ನಡೆಸುವುದು ಸೂಕ್ತವಾಗಿದೆ. ಈ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ, ಸ್ಥಳವನ್ನು ಅಂತಿಮಗೊಳಿಸಲು ನಿರ್ಧರಿಸಲಾಯಿತು. ಮುಖ್ಯ ವೇದಿಕೆ ನಿರ್ಮಾಣ, ವಿವಿಧ ಇಲಾಖೆಗಳ ಅಭಿವೃದ್ಧಿ ಯೋಜನೆಗಳ ಮಾಹಿತಿ ನೀಡುವ ಮಾಹಿತಿ ಕಣಜ ಮಳಿಗೆಗಳು, ಜಿಲ್ಲಾ ಕ್ರೀಡಾಂಗಣದ ಹೊರ ಆವರಣದಲ್ಲಿ ಫಲಾನುಭವಿಗಳಿಗೆ ಊಟದ ವ್ಯವಸ್ಥೆ ಹಾಗೂ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ವಾಹನ ವ್ಯವಸ್ಥೆ, ವಾಹನ ನಿಲುಗಡೆ ವ್ಯವಸ್ಥೆ, ಸಂಚಾರ ವ್ಯವಸ್ಥೆ, ಭದ್ರತಾ ವ್ಯವಸ್ಥೆ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ADVERTISEMENT

ಇದೇ ಸಂದರ್ಭದಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಿದ ಅಜ್ಜಯ್ಯನ ಗುಡಿ ಎದುರಿನ ಜಮೀನನ್ನು ಪರಿಶೀಲಿಸಲಾಯಿತು.

ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ, ಜಿಲ್ಲಾ ಪಂಚಾಯಿತಿ, ರೇಷ್ಮೆ ಇಲಾಖೆ, ವಿವಿಧ ಅಭಿವೃದ್ಧಿ ನಿಗಮಗಳು ಒಳಗೊಂಡಂತೆ ಸರ್ಕಾರದ ವಿವಿಧ ಇಲಾಖೆಗಳಿಂದ ಸೌಲಭ್ಯ ಪಡೆದ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಮಾಹಿತಿ ಹಾಗೂ ಸೌಲಭ್ಯಗಳ ವಿತರಣೆ ಕಾರ್ಯಕ್ರಮ ಜರುಗಲಿದೆ.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶಿವಕುಮಾರ ಗುಣಾರೆ, ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಗೋಪಾಲ, ಜಿ.ಪಂ.ಉಪ ಕಾರ್ಯದರ್ಶಿ ಎಸ್.ಜಿ.ಮುಳ್ಳಳ್ಳಿ, ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ವೈದ್ಯಕೀಯ ಕಾಲೇಜು ಆಡಳಿತಾಧಿಕಾರಿ ಶಿವಾನಂದ ಉಳ್ಳೆಗಡ್ಡಿ, ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.