ಹಾವೇರಿ: ಜಿಲ್ಲೆಯಾದ್ಯಂತ ಸಂವಿಧಾನ ದಿನವನ್ನು ಮಂಗಳವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಜನರು, ಪೂರ್ವಪೀಠಿಕೆಯ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ನಗರದಲ್ಲಿರುವ ಜಿಲ್ಲಾ ವಕೀಲರ ಸಂಘದ ಸಭಾಭವನದಲ್ಲಿ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಅಭಿಯೋಜನಾ ಇಲಾಖೆ ಸಹಯೋಗದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಕೆ.ಸಿ. ಸದಾನಂದಸ್ವಾಮಿ, ‘ಸಂವಿಧಾನವು ಡಾ. ಬಿ.ಆರ್. ಅಂಬೇಡ್ಕರ್ ಅವರು ನಮಗೆ ನೀಡಿರುವ ವರದಾನವಾಗಿದೆ. ಸಮಾಜದ ಎಲ್ಲ ವರ್ಗದವರನ್ನು ಸಮಾನ ರೀತಿಯಲ್ಲಿ ಕಾಣುವುದೇ ಸಂವಿಧಾನ’ ಎಂದರು.
ವಕೀಲ ವಿ.ಕೆ. ಕುಲಕರ್ಣಿ ಅವರು ‘ಸಂವಿಧಾನ ದಿನಾಚರಣೆ’ ವಿಷಯದ ಕುರಿತು ಉಪನ್ಯಾಸ ನೀಡಿದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್.ಎಚ್. ಜತ್ತಿ ಅಧ್ಯಕ್ಷತೆ ವಹಿಸಿದ್ದರು.
ನ್ಯಾಯಾಧೀಶರಾದ ಜಿ.ಎಲ್. ಲಕ್ಷ್ಮಿನಾರಾಯಣ, ಎಂ.ಜಿ. ಶಿವಳ್ಳಿ, ನಿಂಗೌಡ ಪಾಟೀಲ, ಪ್ರಕಾಶ ವಿ., ಬಿ.ಆರ್. ಮುತಾಲಿಕದೇಸಾಯಿ, ರವಿಪ್ರಕಾಶ ಟಿ.ಅವಿನ್, ಬಿಪಿನ್ ಎಚ್.ಎಂ., ಸಂಘದ ಕಾರ್ಯದರ್ಶಿ ಪಿ.ಎಸ್.ಹೆಬ್ಬಾಳ, ಪಬ್ಲಿಕ್ ಪ್ರಾಸಿಕ್ಯೂಟರ್ ಸಿದ್ಧಾರೂಢ ಗೆಜ್ಜಿಹಳ್ಳಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.