ಹಾವೇರಿ: ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಅಧಿಕಾರ ಅನುಭವಿಸಿದ ಶಿಗ್ಗಾವಿ ತಾಲ್ಲೂಕು ವನಹಳ್ಳಿ ಗ್ರಾಮದ ಲಕ್ಷ್ಮೀ ಕೋಂ ಮಾರುತಿ ಕಬ್ಬೇರಗೆ ಹಾವೇರಿಯ ಒಂದನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಜಿ.ಎಲ್. ಲಕ್ಷ್ಮೀನಾರಾಯಣ ಅವರು ಏಳು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹ 19 ಸಾವಿರ ದಂಡ ವಿಧಿಸಿದ್ದಾರೆ.
ಲಕ್ಷ್ಮೀ ಕಬ್ಬೇರ ಅವರು ಹಿಂದೂ ಗಂಗಾಮತ (ಪ್ರವರ್ಗ-1)ಕ್ಕೆ ಸೇರಿದ್ದರೂ, ಸುಳ್ಳು ವ್ಯಾಸಂಗ ಪ್ರಮಾಣಪತ್ರ, ಸುಳ್ಳು ಅಫಿಡವಿಟ್ ಹಾಗೂ ಇತರೆ ದಾಖಲಾತಿಗಳನ್ನು ಸೃಷ್ಟಿಸಿ, 4 ಜೂನ್ 2015ರಂದು ಶಿಗ್ಗಾವಿ ತಹಶೀಲ್ದಾರ್ ಕಚೇರಿಗೆ ಸಲ್ಲಿಸಿ, ಹಿಂದೂ ಗಂಟಿಚೋರ್ಸ್ ಪರಿಶಿಷ್ಟ ಜಾತಿಯ ಪ್ರಮಾಣಪತ್ರ ಪಡೆದಿದ್ದರು. ನಂತರ ಹನುಮರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಿದ್ದ ಸ್ಥಾನಕ್ಕೆ ಸ್ಪರ್ಧಿಸಿ ಆಯ್ಕೆಯಾಗಿ, ನಂತರ ಎಸ್.ಸಿ ಸ್ಥಾನಕ್ಕೆ ಮೀಸಲಾಗಿದ್ದ ಗ್ರಾ.ಪಂ. ಅಧ್ಯಕ್ಷರಾಗಿಯೂ ಆಯ್ಕೆಯಾಗಿದ್ದರು.
ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಸರ್ಕಾರಕ್ಕೆ ಮತ್ತು ನೈಜ ಪರಿಶಿಷ್ಟ ಜಾತಿಯ ಅಭ್ಯರ್ಥಿಗೆ ಮೋಸ ಮಾಡಿದ ಕುರಿತಂತೆ ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿ ದಾವಣಗೆರೆ ಡಿಸಿಆರ್‌ಒ ಪೊಲೀಸ್ ಇನ್‌ಸ್ಪೆಕ್ಟರ್ ಟಿ.ಜಿ. ಶ್ರೀಧರ ಶಾಸ್ತ್ರೀ ಅವರು ಪ್ರಕರಣದ ತನಿಖೆ ನಡೆಸಿ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಸರ್ಕಾರದ ಪರವಾಗಿ ಒಂದನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಸರ್ಕಾರಿ ಅಭಿಯೋಜಕರಾದ ಸರೋಜಾ ಜಿ.ಕೂಡಲಗಿಮಠ ಅವರು ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.