ADVERTISEMENT

ಹಾವೇರಿ: ಆರು ತಿಂಗಳಿನಲ್ಲಿ 2,682 ಮಂದಿಗೆ ನಾಯಿ ಕಡಿತ

ಜಿಲ್ಲಾ ಕಣ್ಗಾವಲು ಸಮಿತಿ ಸಭೆ * ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2024, 15:19 IST
Last Updated 19 ಅಕ್ಟೋಬರ್ 2024, 15:19 IST
ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಣ್ಗಾವಲು ಸಮಿತಿ ಸಭೆ  ನಡೆಯಿತು
ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಣ್ಗಾವಲು ಸಮಿತಿ ಸಭೆ  ನಡೆಯಿತು   

ಹಾವೇರಿ: ‘ಜಿಲ್ಲೆಯಲ್ಲಿ 2024ರ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗಿನ ಅವಧಿಯಲ್ಲಿ 2,682 ಮಂದಿಗೆ ನಾಯಿ ಕಡಿತವಾಗಿದ್ದು, ಎಲ್ಲರಿಗೂ ಸೂಕ್ತ ಚಿಕಿತ್ಸೆ ಕೊಡಿಸಲಾಗಿದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಕಣ್ಗಾವಲು ಸಮಿತಿ ಸಭೆಯಲ್ಲಿ ಅವರು ಮಾಹಿತಿ ನೀಡಿದರು. ಜನರ ಆರೋಗ್ಯ ರಕ್ಷಣೆ ಹಾಗೂ ಚಿಕಿತ್ಸೆಗೆ ಸಂಬಂಧಪಟ್ಟಂತೆ ಆರೋಗ್ಯ ಇಲಾಖೆ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿದರು.

‘ನಾಯಿ ಕಡಿತ ಪ್ರಕರಣಗಳಿಗೆ ವಿವಿಧ ಚಿಕಿತ್ಸೆಗಳು ಲಭ್ಯವಿವೆ. ಇಂಥ ಪ್ರಕರಣಗಳಲ್ಲಿ ಯಾವುದೇ ವ್ಯಕ್ತಿಯಲ್ಲೂ ರೇಬಿಸ್ ರೋಗದ ಲಕ್ಷಣಗಳು ಕಂಡುಬಂದಿರುವುದಿಲ್ಲ. ಅಂಥ ರೋಗಿಗಳ ಮೇಲೆ ನಿರಂತರವಾಗಿ ನಿಗಾ ವಹಿಸಲಾಗಿದೆ. ಅಗತ್ಯವಿರುವ ಎಲ್ಲ ರೋಗಿಗಳಿಗೆ ಚಿಕಿತ್ಸೆಯನ್ನೂ ಮುಂದುವರಿಸಲಾಗಿದೆ’ ಎಂದರು.

ADVERTISEMENT

ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ಮಾತನಾಡಿ, ‘ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕಾಯಿಲೆಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದರು.

‘ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಬೇಕಾದರೆ, ಸಾರ್ವಜನಿಕರಲ್ಲಿ ಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ ಮೂಡಿಸಬೇಕು. ಜನರಿಗೆ ಕಾಯಿಲೆಗಳ ಗಂಭೀರತೆ ಕುರಿತು ಅರಿವು ಮೂಡಿಸಬೇಕು. ಆಗ ಮಾತ್ರ ಸಾಂಕ್ರಾಮಿಕ ರೋಗಗಳನ್ನು ಹತೋಟಿಗೆ ತರಲು ಸಾಧ್ಯವಾಗುತ್ತದೆ’ ಎಂದು ಅವರು ಕಿವಿಮಾತು ಹೇಳಿದರು.

‘ಜನರು ಸಹ ತಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಶುಚಿಯಾಗಿಟ್ಟುಕೊಳ್ಳಬೇಕು. ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ರೋಗಿಗಳಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಲಭ್ಯವಾಗಬೇಕು. ಗ್ರಾಮಗಳಲ್ಲಿ ಆಶಾ ಕಾರ್ಯಕರ್ತೆಯರು, ಶುಶ್ರೂಷಕಿಯರು ಜನರ ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು. ಜನರ ಆರೋಗ್ಯದಲ್ಲಿ ಏನಾದರೂ ಸಮಸ್ಯೆಯಾದರೆ, ಆಸ್ಪತ್ರೆಗೆ ಕಳುಹಿಸಲು ವ್ಯವಸ್ಥೆ ಮಾಡಬೇಕು’ ಎಂದು ಅವರು ತಿಳಿಸಿದರು.

ರಾಷ್ಟ್ರೀಯ ರೇಬಿಸ್ ನಿಯಂತ್ರಣ, ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ, ತೀವ್ರವಾದ ಅತಿಸಾರ, ಕ್ಯಾಸನೂರು ಅರಣ್ಯ ರೋಗ, ಅಯೋಡಿನ್ ಕೊರತೆ ಅಸ್ವಸ್ಥತೆ ನಿಯಂತ್ರಣ ಹಾಗೂ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳ ಬಗ್ಗೆ ಜಿಲ್ಲಾಧಿಕಾರಿಯವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಜಿಲ್ಲಾಮಟ್ಟದ, ತಾಲ್ಲೂಕು ಮಟ್ಟದ ವೈದ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.