ಹಾವೇರಿ: ‘ನಾನು ರಾಜಕೀಯ ಸನ್ಯಾಸಿ ಅಲ್ಲ, ಪಕ್ಷ ನಿರ್ಧರಿಸಿದರೆ ಕೇಂದ್ರ ರಾಜಕಾರಣಕ್ಕೆ ಹೋಗುತ್ತೇನೆ’ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳುವ ಮೂಲಕ ಹಾವೇರಿ–ಗದಗ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸೋಮವಾರ ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆ ಸಂದರ್ಭ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಲ್ಲಿ ದಿನೇ ದಿನೇ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ, ‘ಎಂ.ಪಿ. ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಈಗಾಗಲೇ ಸಮೀಕ್ಷಾ ಕಾರ್ಯ ನಡೆಯುತ್ತಿದೆ. ವರದಿ ನೋಡಿ ನಿರ್ಧಾರ ತೆಗೆದುಕೊಳ್ಳುವುದಾಗಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಈಗಾಗಲೇ ಹೇಳಿದ್ದಾರೆ’ ಎಂದರು.
ಪಕ್ಷದ ವರಿಷ್ಠರು ಟಿಕೆಟ್ ನೀಡುವ ಅಭ್ಯರ್ಥಿ ಪರ ನಾವೆಲ್ಲರೂ ಕೆಲಸ ಮಾಡುತ್ತೇವೆ. ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಕೈ ಜೋಡಿಸುತ್ತೇವೆ ಎಂದು ಹೇಳಿದರು.
ಜಗದೀಶ ಶೆಟ್ಟರ್ ಬಿಜೆಪಿಗೆ ಮರಳಿ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ‘ಶೆಟ್ಟರ್ ಮರಳಿ ಮನೆಗೆ ಬಂದಿದ್ದಾರೆ. ರಾಹುಕಾಲ, ಗುಳಿಕಕಾಲ, ಅಂತ ಇರ್ತಾವಲ್ಲ, ಕಾಲ ಕೆಟ್ಟಿದ್ದರಿಂದ ಅದೇನೇನೋ ಆಗಿ ಅವರಿಗೂ ಅನ್ಯಾಯವಾಗಿತ್ತು. ಇವತ್ತು ಆ ಅನ್ಯಾಯವನ್ನು ಸರಿ ಮಾಡುತ್ತೇವೆ ಎಂದು ಹಿರಿಯರು ಮರಳಿ ಪಕ್ಷಕ್ಕೆ ಕರೆ ತಂದಿದ್ದಾರೆ. ಶೆಟ್ಟರ್ ಅವರು ಅನುಭವಿ ರಾಜಕಾರಣಿಯಾಗಿದ್ದು, ಮರಳಿ ನಮ್ಮ ಪಕ್ಷಕ್ಕೆ ಬಂದಿದ್ದು ಒಂದು ದೊಡ್ಡ ಶಕ್ತಿ ಬಂದತಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.